ಶಿವಮೊಗ್ಗ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇನ್ನು ಮುಂದೆ ಆನ್ ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆ ಆಗಲಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್ ಹೇಳಿದರು.ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕಾರ್ಮಿಕರ ಇಲಾಖೆ ಮತ್ತು ಇಂದಿರಾ ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇನ್ನು ಮುಂದೆ ಆನ್ ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆ ಆಗಲಿದೆ. ಇದರಿಂದ ಕಟ್ಟಡ ಕಾರ್ಮಿಕರು ತಮ್ಮಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅಲೆದಾಡುವುದು ತಪ್ಪಲಿದೆ ಎಂದರು.ಎಲ್.ಕೆ.ಜಿ ಮಕ್ಕಳಿಗೆ ಐದು ಸಾವಿರ ಧನ ಸಹಾಯ ಮತ್ತು ಸ್ನಾತಕೋತ್ತರ ಪದವಿಯವರೆಗೆ ವಿದ್ಯಾರ್ಥಿ ವೇತನ ಲಭ್ಯವಾಗಲಿದೆ. ದುಡಿಯುವ ವರ್ಗಕ್ಕೆ ಸಹಾಯಧನ ಬಹಳ ದೊಡ್ಡ ಆಸರೆಯಾಗಲಿದೆ. ಸರ್ಕಾರದ ಈ ಕಾರ್ಯಕ್ರಮದಿಂದ ಕಟ್ಟಡ ಕಾರ್ಮಿಕರ ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ಕುಟುಂಬದ ಪೋಷಣೆಗೆ ಅನುಕೂಲವಾಗಲಿದೆ.
ಕಟ್ಟಡ ಕಾರ್ಮಿಕರ ಮಕ್ಕಳು ಮುಖ್ಯ ವಾಹಿನಿಗೆ ಬಂದಂತಾಗುತ್ತದೆ ಎಂದು ಹೇಳಿದರು.ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸುಮಾರು 25 ಸಾವಿರ ಕೋಟಿ ರೂಪಾಯಿ ಇದೆ. ಕಟ್ಟಡ ಕಾರ್ಮಿಕರ ಮಕ್ಕಳ ಮದುವೆಗೆ ಧನ ಸಹಾಯ ನೀಡಲಾಗುತ್ತಿದೆ. ಮನೆ ಕಟ್ಟಿಕೊಳ್ಳಲು ಕಾರ್ಮಿಕರ ಇಲಾಖೆಯಿಂದ ಧನಸಹಾಯ ನೀಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ಕಟ್ಟಡ ಕಾರ್ಮಿಕರು ಉಪಯೋಗಿಸಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಇಂದಿರಾ ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿ. ಲಕ್ಷ್ಮೀ, ಸೇವಾದಳ ಅಧ್ಯಕ್ಷ ವೈ.ಹೆಚ್. ನಾಗರಾಜ್, ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಮುಜೀಬ್, ಮುಖಂಡರಾದ ವಸಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.