ಶಿವಮೊಗ್ಗ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗೃಹ ಖಾತೆ ನಿರ್ವಹಣೆಯಲ್ಲಿ ವೈಫಲ್ಯರಾಗಿರುವ ಗೃಹ ಸಚಿವರ ಆರಗ ಜ್ಞಾನೇಂದ್ರ ಅವರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿಯೇ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಸೇರಿದಂತೆ ಮಾದಕ ವಸ್ತುಗಳ ಮಾರಾಟಕ್ಕೆ ನಿಯಂತ್ರಣವೇ ಇಲ್ಲವಾಗಿದೆ. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯ ಗಾಂಜಾ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಎಂದು ದೂರಿದರು.
ಗಾಂಜಾ ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಯುವ ಸಮುದಾಯ ಅಪರಾಧ ಕೃತ್ಯಗಳಲ್ಲಿಯೂ ಭಾಗಿಯಾಗುತ್ತಿದ್ದು, ಇದರಿಂದ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಸರಗಳ್ಳತನ ಪ್ರಕರಣಗಳು ಸಹ ಅಧಿಕವಾಗಿದ್ದು, ಶುಕ್ರವಾರ ಶಿವಮೊಗ್ಗ ನಗರದಲ್ಲಿಯೇ ಮರ‍್ನಾಲ್ಕು ಕಡೆಗಳಲ್ಲಿ ಸರಗಳ್ಳತನ ನಡೆದಿದೆ. ಇದರಿಂದ ಶಿವಮೊಗ್ಗದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ ಎಂದು ದೂರಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಬೇಕು. ಯುವ ಸಮುದಾಯ ಗಾಂಜಾ ವ್ಯಸನಕ್ಕೆ ಬಲಿಯಾಗುವುದನ್ನು ತಪ್ಪಿಸಬೇಕು. ಸರಗಳ್ಳತನ ಹೆಚ್ಚಾಗುತ್ತಿರುವುದರಿಂದ ಮಹಿಳೆಯರು, ಯುವತಿಯರು ಓಡಾಟ ನಡೆಸುವುದಕ್ಕೂ ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಸರಗಳ್ಳತನ, ಗಾಂಜಾ ಮಾರಾಟ ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಭಯಮುಕ್ತ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಗೃಹ ಖಾತೆ ನಿರ್ವಹಿಸುವಲ್ಲಿ ವೈಫಲರಾಗಿರುವ ಸಚಿವ ಆರಗ ಜ್ಞಾನೇಂದ್ರ ಅವರಿಂದ ಕೂಡಲೇ ರಾಜಿನಾಮೆ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಒತ್ತಾಯಿಸಿದ್ದಾರೆ.