ಶಿವಮೊಗ್ಗ: ಭಾರತದಲ್ಲಿ ಹೆಣ್ಣು ಮಕ್ಕಳಿಗೆ ತಾಯಿ ಸ್ಥಾನ ನೀಡಿ ಗೌರವಿಸಲಾಗುತ್ತದೆ. ಹೆಣ್ಣುಮಕ್ಕಳು ಪುರುಷರಿಗೆ ಸರಿಸಮಾನರಾಗಿ ಸಂಸಾರ ನಿರ್ವಹಿಸುವಲ್ಲಿ ಉನ್ನತ ಪಾತ್ರ ವಹಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದ್ದಾರೆ.

ಅವರು ಇಂದು ನಗರದ ಜನ ಶಿಕ್ಷಣ ಸಂಸ್ಥೆ ಏರ್ಪಡಿಸಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ, ವಿವಿಧ ವೃತ್ತಿ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮತ್ತು ಮಹಿಳಾ ಸಾಧಕಿಯರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ ಹೋರಾಟದಲ್ಲೂ ಕೂಡ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ.

ನಾವೆಲ್ಲರೂ ಭಾರತ್ ಮಾತಾ ಕೀ ಜೈ ಎಂದು ಹೇಳುತ್ತೇವೆ. ನಮ್ಮ ದೇಶದಲ್ಲಿ ಮಹಿಳೆಯರಿಗೆ ದೇವಿಯ ಸ್ವರೂಪ ನೀಡಿದ್ದೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಾಂತರ ಮಹಿಳೆಯರಿಗೆ ಆಡಳಿತದಲ್ಲಿ ಸಮಾನಾವಕಾಶ ನೀಡಲು ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಶೇ. 50 ಕ್ಕೆ ಏರಿಸಿದರು. ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಮಹಿಳೆಯರಿಗೆ ಮಹತ್ವದ ಸ್ಥಾನವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.ಜನಶಿಕ್ಷಣ ಸಂಸ್ಥೆ ಹಲವಾರು ವರ್ಷಗಳಿಂದ ಹೆಣ್ಣುಮಕ್ಕಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡುವುದರ ಮೂಲಕ ಸ್ವಂತ ಉದ್ಯೋಗಿಗಳಾಗುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.

ಗುರುಕುಲ ಪದ್ಧತಿ ಮೂಲಕ ಉತ್ತಮ ಸಂಸ್ಕಾರಯುತ ಶಿಕ್ಷಣ ನೀಡುತ್ತಿದ್ದ ಭಾರತೀಯ ಶಿಕ್ಷಣ ಪದ್ಧತಿಯನ್ನು ಬ್ರಿಟೀಷರು ಹಾಳು ಮಾಡಿ ಅವರ ಶಿಕ್ಷಣ ಪದ್ಧತಿ ಹೇರಿದರು. ಅವರು ದೇಶಬಿಟ್ಟು ತೊಲಗಿದ ನಂತರ ನಮ್ಮನ್ನಾಳಿದ ಸರ್ಕಾರಗಳು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರಂತಹ ವೀರರ ಇತಿಹಾಸವನ್ನು ಪಠ್ಯದಲ್ಲಿ ಅಳವಡಿಸಲು ಮತ್ತು ಈಗಿನ ಪೀಳಿಗೆಗೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ವಿಫಲವಾಗಿವೆ. ಈಗಿನ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುತ್ತಿದ್ದು, 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂಡಿಯಾ ಗೇಟ್ ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಅನಾವರಣ ಮಾಡಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು 11 ಬಾರಿ ಜೈಲು ವಾಸ ಅನುಭವಿಸಿ 6 ವರ್ಷ ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನದ ನೆನಪುಗಳು ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದರು.ಪ್ರಧಾನಿ ಮೋದಿ ಅವರ ಹೊಸ ಶೈಕ್ಷಣಿಕ ನೀತಿ ಮತ್ತು ಅವರು ಕೌಶಾಲ್ಯಾಭಿವೃದ್ಧಿ ಮೂಲಕ ಹೆಣ್ಣುಮಕ್ಕಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಹೆಣ್ಣುಮಕ್ಕಳ ಮಹತ್ವದ ಬಗ್ಗೆ ತಿಳಿಸಿ ಹೆಣ್ಣು ಮಕ್ಕಳು ತಮ್ಮ ಹಕ್ಕಿನ ತಿಳಿವಳಿಕೆ ಪಡೆಯಬೇಕು ಎಂದರು.ಈ ಸಂದರ್ಭದಲ್ಲಿ ಜನಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರೊ. ಎಸ್.ಬಿ. ಕಮಲಾಕರ್, ನಿರ್ದೇಶಕಿ ಎಸ್.ವೈ. ಅರುಣಾದೇವಿ, ಕಾರ್ಯಕ್ರಮಾಧಿಕಾರಿ ಎಂ. ಸುಮನಾ ಮೊದಲಾದವರಿದ್ದರು. 

ವರದಿ ಮಂಜುನಾಥ್ ಶೆಟ್ಟಿ…