ಶಿವಮೊಗ್ಗ: ಶಿವಮೊಗ್ಗವನ್ನು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಅವರು ಹೇಳಿದರು.ಅವರು ಇಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಜಿಲ್ಲೆಯ ಪ್ರಗತಿಗೆ ಮಹತ್ವದ್ದಾಗಿರುವ ವಿಮಾನ, ರೈಲು ಮತ್ತು ರಸ್ತೆ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಅಂತೆಯೇ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಕ್ರಮ ವಹಿಸಲಾಗಿದೆ ಎಂದವರು ನುಡಿದರು.ಕೇಂದ್ರ ಪುರಸ್ಕøತ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಸಂಕೀರ್ಣ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, ರಾಜ್ಯದ ಪಾಲಿನ ಅನುದಾನ ಈಗಾಗಲೇ ಬಿಡುಗಡೆಗೊಂಡಿದೆ. ಇಂತಹ ಇನ್ನಷ್ಟು ರಚನಾತ್ಮಕ ಕಾರ್ಯಯೋಜನೆಗಳನ್ನು ಹಿರಿಯರ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.ಮುಂದಿನ ವಾರದ ಭೇಟಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಹಾಗೂ ಸ್ಮಾರ್ಟ್ಸಿಟಿ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಲಾಗುವುದು ಎಂದ ಅವರು ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಜೂನ್-ಜುಲೈ ಮಾಹೆಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಸದ್ಯದಲ್ಲಿ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳಿಗೆ ಸುಮಾರು 1,500 ಕೋಟಿ ಅನುದಾನ ಮಂಜೂರಾಗುವ ನಿರೀಕ್ಷೆಯಿದ್ದು, ಪೂರ್ವಯೋಜನೆಯಂತೆ ಉದ್ದೇಶಿತ ಕಾಮಗಾರಿಗಳಿಗಾಗಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದರು. ಮುಂದಿನ 20ವರ್ಷಗಳಲ್ಲಿ ಜಿಲ್ಲೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಜಿಲ್ಲೆಯ ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳ ವಿಕಾಸಕ್ಕೆ 250.00ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಂತೆಯೇ ಶಿವಮೊಗ್ಗ – ಶಿಕಾರಿಪುರ ರೈಲ್ವೇ ಮಾರ್ಗದ ನಿರ್ಮಾಣಕ್ಕೆ ಅನುದಾನ ಕೋರಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಭೂಸ್ವಾದೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಯೋಜನೆಯ ಅನುಷ್ಠಾನಕ್ಕೆ ಭೂಮಿಯನ್ನು ಒದಗಿಸಿದ ರೈತರಿಗೆ ಪರಿಹಾರಧನ ಬಿಡುಗಡೆಯಾಗಿದೆ ಎಂದರು.
ಶಿವಮೊಗ್ಗದಿಂದ ತಾಳಗುಪ್ಪ ರೈಲ್ವೇ ಸಂಪರ್ಕವಿದ್ದು, ತಾಳಗುಪ್ಪದಿಂದ ಸಿದ್ದಾಪುರ ಮಾರ್ಗದ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 03ಕೇಂದ್ರೀಯ ವಿದ್ಯಾಲಯಗಳನ್ನು ಆರಂಭಿಸಲು, ತೀರ್ಥಹಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅಗತ್ಯವಿರುವ 100ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ವಾಲ್ಮೀಕಿ ಕೇಂದ್ರೀಯ ಶಾಲೆ ಆರಂಭಿಸಲು ಹಾಗೂ ಅಟಲ್ಜೀ ಮೊರಾರ್ಜಿ ಶಾಲೆ ಆರಂಭಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂದ ಅವರು, ಶಿವಮೊಗ್ಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲಿ ಕೇಂದ್ರದಿಂದ ಅನುಮತಿ ದೊರೆಯುವ ವಿಶ್ವಾಸ ತಮಗಿರುವುದಾಗಿ ಅವರು ನುಡಿದರು. ಈಗಾಗಲೆ ಜಿಲ್ಲೆಯ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ವಿಶೇಷ ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿ ವಾಣೀಜ್ಯೋದ್ಯಮ ಹಾಗೂ ಪ್ರವಾಸೋದ್ಯಮದ ಸರ್ವಾಂಗೀಣ ವಿಕಾಸಕ್ಕೆ ಹೆಚ್ಚಿನ ಗಮನಹರಿಸಲಾಗಿದೆ. ಸುಮಾರು 200ಕೋಟಿ ರೂ.ಗಳ ವೆಚ್ಚದಲ್ಲಿ ಜೋಗಫಾಲ್ಸ್ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಶೇ.40ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು ಜೂನ್ ಮಾಸಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಚರಿಸುವ ಭಾರೀ ಪ್ರಮಾಣದ ಹಡಗುಗಳು ತಾತ್ಕಾಲಿಕ ಅವಧಿಗೆ ನಿಲುಗಡೆಗೊಳಿಸಲು ಅನುಕೂಲವಾಗುವಂತೆ ಬೈಂದೂರಿನಲ್ಲಿ ಬಂದರು ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. 260ಕೋಟಿ ರೂ.ಗಳ ವೆಚ್ಚದಲ್ಲಿ ಮರವಂತೆ ಬೀಚ್ ಅಭಿವೃದ್ದಿಗೆ ಯತ್ನಿಸಲಾಗುವುದು ಎಂದ ಅವರು ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಯಿಂದ ಜಿಲ್ಲೆಗೆ ಪ್ರತಿದಿನ ಸುಮಾರು 10000-20000ಪ್ರವಾಸಿಗರು ಭೇಟಿ ನೀಡಲಿದ್ದಾರೆ ಎಂದರು. ಅಲ್ಲದೇ ಶಿವಮೊಗ್ಗ ಸಮೀಪದ ಲಯನ್ ಸಫಾರಿಯಿಂದ ಅನಂದಪುರದವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 300ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳ ನಡುವೆ ಮೇಲ್ಸೇತುವೆಯೊಂದನ್ನು ನಿರ್ಮಿಸಲಾಗುವುದು. ಅಲ್ಲದೇ ತಮ್ಮ ಅಗತ್ಯ ಕಾರ್ಯಗಳಿಗಾಗಿ ಜಿಲ್ಲಾ ಕೇಂದ್ರಗಳಿಗೆ ಆಗಮಿಸುವ ಜನರ ನಿರೀಕ್ಷೆಯ ಕೆಲಸ-ಕಾರ್ಯಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳಲು 50ಕೋಟಿ ರೂ.ಗಳ ವೆಚ್ಚದಲ್ಲಿ ಜಿಲ್ಲಾಡಳಿತ ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಡಿವೈಎಸ್ಪಿ ಪ್ರಶಾಂತ ಮುನ್ನೋಳಿ ಮುಂತಾದವರು ಉಪಸ್ಥಿತರಿದ್ದರು.