ಶಿವಮೊಗ್ಗ ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಆದೇಶ ಮಾಡಿದ್ದಾರೆ.

ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ. ಶಾಲಾ ಕಾಲೇಜು ಆವರಣದ 200ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ಯಾವುದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…