ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಹೊಳಲೂರು ಗ್ರಾಪಂಗೆ ಏ. 24 ರಂದು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಮೋದಿ ಆಗಮನದ ಹಿನ್ನಲೆಯಲ್ಲಿ ಹೊಳಲೂರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಈ ದೇಶದ ಹೆಮ್ಮೆಯ ಪ್ರಧಾನಿ ಮೋದಿ ಅವರು ಇಡೀ ದೇಶದ ಗ್ರಾಮೀಣ ಇಲಾಖೆಗಳ ಪರಿಶೀಲನೆ ಮಾಡುವ ಹಿನ್ನಲೆಯಲ್ಲಿ ಹೊಳಲೂರಿಗೆ ಭೇಟಿ ನೀಡಲಿದ್ದಾರೆ. ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಹೊಳಲೂರಿನಲ್ಲಿರುವ ಸುಮಾರು 15 ಎಕರೆ ಜಾಗದಲ್ಲಿ 5 ಎಕರೆ ಜಾಗವನ್ನು ಹೆಲಿಪ್ಯಾಡ್ ನಿರ್ಮಿಸಲು ತೀರ್ಮಾನಿಸಲಾಗಿದೆ.
ಉಳಿದ 10 ಎಕರೆ ಜಾಗದಲ್ಲಿ ಕಾರ್ಯಕ್ರಮಕ್ಕಾಗಿ ನಿಗದಿಗೊಳಿಸಲಾಗಿದೆ ಎಂದರು. ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಇಲಾಖೆಗಳ ಪರಿಶೀಲನೆ ನಡೆಸಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದು, ಮಧ್ಯಾಹ್ನ 1 ಗಂಟೆಗೆ ಅವರ ಭಾಷಣ ಇರುತ್ತದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಜಿಪಂನಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಅಧಿಕಾರಿಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಪಂ ಮುಖ್ಯ ನಿರ್ವಹಣಾಧಿಕಾರಿ, ಸೇರಿದಂತೆ ಹಲವರೊಡನೆ ಚರ್ಚಿಸಲಾಗಿದೆ. ಒಂದು ರೀತಿಯಲ್ಲಿ ಪ್ರಗತಿ ಪರಿಶೀಲನೆ ಮಾಡಿದ್ದೇವೆ.
ಈ ತಿಂಗಳ 30 ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದೆ. ಅದು ಮುಗಿದ ನಂತರ ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದರು.ಪರಿಶೀಲನೆ:ಪ್ರಧಾನಿ ಮೋದಿ ಅವರು ಹೊಳಲೂರು ಗ್ರಾ.ಪಂ.ಗೆ ಏ. 24 ರಂದು ಭೇಟಿ ನೀಡಲಿದ್ದು, ಈ ಹಿನ್ನಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಎಸ್. ದತ್ತಾತ್ರಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಆರ್.ಡಿ.ಪಿ.ಆರ್. ಆಯುಕ್ತೆ ಶಿಲ್ಪಾ ನಾಗ್, ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್, ಜಿಪಂ ಸಿಇಒ ಎಂ.ಎಲ್. ವೈಶಾಲಿ, ಇಲಾಖೆಯ ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದರು.