ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.
ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಬಜರಂಗದಳ, ಹಿಂದೂ ಮಹಾ ಸಂಘಟನೆ ಸೇರಿದಂತೆ ಬಿಜೆಪಿ ನಾಯಕರು ಕೂಡ ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಒತ್ತಾಯಿಸಿದ್ದರು. ಹರ್ಷ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಇದುವರೆಗೂ ಈ ಕೊಲೆ ಪ್ರಕರಣಕ್ಕೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.ರಾಷ್ಟ್ರೀಯ ತನಿಖಾ ದಳದ ಪ್ರಕಾರ ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಾಗುತ್ತದೆ.
ಈ ಪ್ರಕರಣಗಳನ್ನು ಸಾಮಾನ್ಯವಾಗಿ ದೇಶದ ಏಕತೆಗೆ ಭಂಗ ತರುವ ಉದ್ದೇಶದಿಂದ ಸಂಚು ನಡೆಸುವವರ ವಿರುದ್ಧ ದಾಖಲಿಸಲಾಗುತ್ತದೆ. ಶಿವಮೊಗ್ಗದ ಪೊಲೀಸರು ಕೂಡ ಇದರ ಹಿಂದೆ ದೊಡ್ಡ ಕೈವಾಡವಿರಬಹುದು ಎಂದು ಶಂಕಿಸಿದ್ದಾರೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವರ್ಗಾಯಿಸಲಾಗಿದೆ.ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೂಡ ಹರ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಎನ್ಐಎ ತನಿಖೆ ಆಗಬೇಕೆಂದು ಒತ್ತಾಯಿಸಿದ್ದರು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದಿದೆ.