ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕುವೆಂಪು ವಿವಿ ಮೊದಲನೇ ವರ್ಷದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಬಿಎ, ಬಿ.ಎಸ್.ಸಿ. ವಿದ್ಯಾರ್ಥಿಗಳಿಗೆ ಸುಮಾರು 300 ರೂ. ಮತ್ತು ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಸುಮಾರು 800 ರೂ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿದ್ಯಾರ್ಥಿಗಳು ಖಂಡಿಸಿದರು.ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಹೊರೆಯಾಗುತ್ತದೆ. ಈ ಕೂಡಲೇ ಶುಲ್ಕ ಹೆಚ್ಚಳ ಆದೇಶ ಹಿಂಪಡೆಯಬೇಕು.

ಅಷ್ಟೇ ಅಲ್ಲದೇ ವಿದ್ಯಾರ್ಥಿಗಳ ರಿ.ನಂ. ದೊರಕದೇ ಇರುವುದರಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಲೋಹಿತ್ ಕುಮಾರ್ ಕೆ.ಎಸ್., ಚಂದ್ರಶೇಖರ್, ಸ್ವಾತಿ, ಸ್ವರೂಪ್, ಮಾಲತೇಶ್, ಪುನೀತ್, ಪ್ರಮೋದ್, ರೋಹಿತ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…