ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಇಂದು ಮಹಾವೀರ ವೃತ್ತದಲ್ಲಿ ಸ್ಕೂಟರ್ ಶವಯಾತ್ರೆ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಎನ್.ಡಿ.ಎ. ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ ಎಂದು ದೂರಿದರು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವ ಬದಲು ಮನಸೋ ಇಚ್ಛೆ ಹೆಚ್ಚಳ ಮಾಡುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಹಾಳಾಗಿದೆ. ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಕೋವಿಡ್ ನಿಂದಾಗಿ ಜನ ಮತ್ತಷ್ಟು ಹೈರಾಣಾಗಿದ್ದಾರೆ. ಈ ಮಧ್ಯೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನ ಜೀವನ ನಡೆಸುವುದು ದುಸ್ತರವಾಗಿದೆ ಎಂದು ದೂರಿದರು.ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಉಕ್ರೇನ್, ರಷ್ಯಾ ಯುದ್ಧದ ನೆಪದಲ್ಲಿ ಇಂಧನ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಿದೆ. ಬೆಲೆಗಳನ್ನು ನಿಯಂತ್ರಿಸಿ ಜನಸಾಮಾನ್ಯರ ಬದುಕು ಸುಗಮವಾಗಿ ಮಾಡಬೇಕಿದ್ದ ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಕೂಡಲೇ ಜನ ವಿರೋಧಿ ಕೇಂದ್ರ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ರವಿ ಕಾಟಿಕೆರೆ ಹಾಗೂ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಚೇತನ್, ಯುವ ಮುಖಂಡ ಸಿ.ಜಿ. ಮಧುಸೂದನ್, ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷ ಮೊಹಮ್ಮದ್ ನಿಹಾಲ್, ಚಂದ್ರೋಜಿ ರಾವ್, ರವಿ, ಕಿರಣ್, ಸಾಗರ್, ಸುಹಾಸ್, ಮಂಜು, ವಿಕ್ರಂ, ಭರತ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…