ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ 115 ನೇ ಜಯಂತಿ ಕಾರ್ಯಕ್ರಮ ವಿಳಂಬವಾಗಿದ್ದನ್ನು ವಿರೋಧಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ದಿಢೀರ್ ವೇದಿಕೆ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, 11 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಗಂಟೆ ನಂತರವೂ ಆರಂಭವಾಗಲಿಲ್ಲ. ಅದಕ್ಕೆ ಕಾರಣ ಸಚಿವಾಗಲೀ, ಅಧಿಕಾರಿಗಳಾಗಲೀ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮಕ್ಕೆ ಬಂದಿದ್ದ ದಲಿತ ಸಂಘಟನೆಗಳ ಮುಖಂಡರು ಕಾರ್ಯಕ್ರಮ ವಿಳಂಬವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ವೇದಿಕೆ ಮುಂಭಾಗ ಧರಣಿ ನಡೆಸಿ ಅಧಿಕಾರಿಗಳ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಧರಣಿ ನಡೆಸುತ್ತಿದ್ದ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಸೇರಿದಂತೆ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.