ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆಯಲ್ಲಿ ಸಚಿವ ಸಂಪುಟದಿಂದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ ಮಲ್ಲೇಶ್ವರನಗರದ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ರೈಲ್ವೇ ಕ್ರಾಸ್ ಬಳಿಯೇ ತಡೆದು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ವಾಹನಗಳಲ್ಲಿ ತೆರಳಿ ಹೊಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಸಚಿವ ಈಶ್ವರಪ್ಪ ನಿವಾಸಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸೇರಿದಂತೆ 30 ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು ಡಿಎಆರ್ ಮೈದಾನಕ್ಕೆ ಕರೆದೊಯ್ದರು.ಬೆಳಗ್ಗೆಯಿಂದಲೇ ಈಶ್ವರಪ್ಪ ನಿವಾಸದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.ಕಾಂಗ್ರೆಸ್ ಮುಖಂಡರಾದ ಹೆಚ್.ಸಿ. ಯೋಗೀಶ್, ಎಸ್.ಪಿ. ದಿನೇಶ್, ಎನ್. ರಮೇಶ್, ಇಕ್ಕೇರಿ ರಮೇಶ್, ಕೆ. ರಂಗನಾಥ್, ಮೋಹನ್, ಬಾಬು, ಚೇತನ್, ಲೋಕೇಶ್ ಸೇರಿದಂತೆ 30 ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. 60 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…