ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಆಸ್ತಿ ಪಾಸ್ತಿ ನಷ್ಟ, ಬೆಳೆಹಾನಿ, ಗುಡ್ಡ ಕುಸಿತ ಮುಂತಾದ ವಿಕೋಪಗಳಿಗೆ ಪರಿಹಾರ ಹಾಗೂ ಶಾಶ್ವತ ಸೌಕರ್ಯ ಒದಗಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಇಂದು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಅಪಾರ ಆಸ್ತಿ, ಪಾಸ್ತಿ ನಷ್ಟವಾಗಿದೆ. ರೈತರು ಬೆಳೆದ ಮೆಕ್ಕೆಜೋಳ, ಭತ್ತದ ನಾಟಿ ಸೇರಿದಂತೆ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರದ ಕಾರ್ಯದರ್ಶಿಗಳು ಕೂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸಿಎಂಗೆ ನಾವೂ ಮನವಿ ಮಾಡಿದ್ದೇವೆ. ಪರಿಹಾರ ನೀಡುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬೈಂದೂರು ಕ್ಷೇತ್ರದಲ್ಲಿ ಕಡಲಕೊರೆತ ಉಂಟಾಗಿದೆ. ಹಲವು ಕಡೆ ಗುಡ್ಡ ಕುಸಿತವಾಗಿವೆ. ಆಗುಂಬೆಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿದೆ. ಈ ಕುರಿತಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈಗಾಗಲೇ ಸಂಪರ್ಕದಲ್ಲಿದ್ದು, ಇಂದು ನಾಳೆಯೊಳಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ , ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ , ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಮುಂತಾದವರು ಉಪಸ್ಥಿತರಿದ್ದರು.