ಶಿವಮೊಗ್ಗ: ಬಡವರ ಹಸಿವು ನೀಗಿಸಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಬಿಜೆಪಿ ಸರ್ಕಾರದಲ್ಲಿ ಸಂಪೂರ್ಣ ಅವ್ಯವಸ್ಥೆಗೊಂಡಿದ್ದು ಮುಚ್ಚುವ ಹಂತಕ್ಕೆ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದರು.

ಅವರು ಇಂದು ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ಆಹಾರ ಸೇವಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಸಿವುಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ತಿಂಡಿಯನ್ನು ನೀಡಲಾಗುತ್ತಿತ್ತು. ಇದರಿಂದ ಬಹಳಷ್ಟು ಬಡವರಿಗೆ ಅನುಕೂಲವಾಗುತ್ತಿತ್ತು. ಆದರೆ, ಈಗಿನ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನೇ ಸಂಪೂರ್ಣವಾಗಿ ಅಸ್ತವ್ಯಸ್ಥಗೊಳಿಸಿದೆ. ನಿರ್ಲಕ್ಷ್ಯ ಮಾಡುತ್ತಿದೆ. ಕಳಪೆಮಟ್ಟದ ಆಹಾರ ನೀಡಲಾಗುತ್ತಿದೆ. ಇದರಿಂದ ಬಡವರಿಗೆ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂದು ದೂರಿದರು.

ಪ್ರತಿದಿನ ಒಂದು ಕ್ಯಾಂಟೀನ್ ನಲ್ಲಿ 500 ಜನರಿಗೆ ಊಟ, ತಿಂಡಿ ನೀಡಲಾಗುತ್ತಿತ್ತು. ಈಗ ಕಳಪೆ ಆಹಾರ ಸರಬರಾಜು ಮಾಡುತ್ತಿರುವುದರಿಂದ 100 ಕ್ಕೂ ಕಡಿಮೆ ಸಂಖ್ಯೆಯಲ್ಲಿ ಬಡವರು ಭೇಟಿ ನೀಡುತ್ತಿದ್ದಾರೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ್, ತಬಸ್ಸುಮ್, ರಾಜಶೇಖರ್, ಅಬ್ದುಲ್ ರೆಹಮಾನ್, ಸಂಜಯ್, ಸೈಯದ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…