ಶಿವಮೊಗ್ಗ,: ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗೆ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಎನ್ಎಸ್ಯುಐ ಜಿಲ್ಲಾ ಘಟಕದ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನೇ ದಿನೇ ಗಾಂಜಾ, ಡ್ರಗ್ಸ್, ಮಾದಕ ವಸ್ತುಗಳ ಕುರಿತು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಗಾಂಜಾ, ಮಾದಕ ವಸ್ತುಗಳ ಮಾರಾಟ ನಿರಂತರವಾಗಿ ಸಾಗಿದೆ. ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾಗಿರುವ ಹಾಗೂ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಲು ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಜಿಲ್ಲೆಯಲ್ಲಿ ಇತ್ತೀಚೆಗೆ ಬಹುತೇಕ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ, ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಶಾಲಾ-ಕಾಲೇಜುಗಳ ಆವರಣದಲ್ಲಿ ಗಾಂಜಾ, ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪ್ರತಿಷ್ಠಿತ ಕಾಲೇಜಿನ ಎದುರಿನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ಬಿದ್ದು ಒದ್ದಾಡುತ್ತಿರುವುದು ವೈರಲ್ ಆಗಿದೆ. ಇದು ಅತ್ಯಂತ ಬೇಸರದ ಸಂಗತಿ. ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗಾಂಜಾ ಮಾರಾಟ ಹಾಗೂ ಬಳಕೆ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ, ಮಾದಕ ವಸ್ತುಗಳ ಮಾರಾಟ ನಿಯಂತ್ರಿಸುವಲ್ಲಿ ಹಾಗೂ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿAದ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.ಪ್ರತಿಭಟನೆಯಲ್ಲಿ ಎನ್ಎಸ್ಯುಐ ನಗರ ಅಧ್ಯಕ್ಷ ಚರಣ್, ಹರ್ಷಿತ್, ಎಸ್.ಎಸ್.ವಿಜಯ್ಕುಮಾರ್, ವಿಶಾಲ್, ಕಿರಣ್, ಸಚ್ಚಿನ್, ಸೋನು, ಪ್ರದೀಪ್, ಗಗನ್, ಅಭಿ, ಪವನ್, ಮುರುಳಿ, ಮನು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…