ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ 75 ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮ ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಆಯೋಜಿಸಿರುವ ಕಾಲ್ನಡಿಗೆಗೆ ಸಹಸ್ರ, ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ವಕ್ತಾರ ಎಂ.ರಮೇಶ್ ಶಂಕರಘಟ್ಟ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, 75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿನಲ್ಲಿ ಆಗಸ್ಟ್ 15 ರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದವರೆಗೆ ಹಮ್ಮಿಕೊಂಡಿರುವ ಕಾಲ್ನಡಿಗೆಯು ದೇಶದ ಸ್ವಾತಂತ್ರ್ಯದ ಇತಿಹಾಸ ಸ್ಮರಣೆ ಈ ಐತಿಹಾಸಿಕ ಕಾರ್ಯಕ್ರಮದ ಆಶಯವಾಗಿದೆ. ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ.ಈ ಕಾರ್ಯಕ್ರಮ ಪ್ರತಿಯೊಬ್ಬರ ಕಾರ್ಯಕ್ರಮ ಆಗಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿರುವ ಕರೆಯ ಹಿನ್ನಲೆಯಲ್ಲಿ ಶಿವಮೊಗ್ಗದಿಂದಲೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುತ್ತಿದ್ದಾರೆ.

ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಕ್ರಮವಾಗಿ ಮಾಡಲು ಪಕ್ಷ ತೀರ್ಮಾನಿಸಿದ್ದು, ಈಗಾಗಲೇ 62 ಸಾವಿರಕ್ಕೂ ಹೆಚ್ಚು ಸದಸ್ಯರು ಆನ್ಲೈೆನ್ ಮೂಲಕ ಪಾದಯಾತ್ರೆಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನೋಂದಣಿ ಮಾಡಿಕೊಂಡಿರುವುದು ವಿಶೇಷ. ನೋಂದಣಿ ಮಾಡಿಕೊಂಡವರೆಲ್ಲರಿಗೂ ರಾಷ್ಟ್ರಧ್ವಜ, ಟೀ ಶರ್ಟ್ ಇರುವ ಕಿಟ್ ವಿತರಣೆ ಮಾಡಲಾಗುತ್ತಿದೆ. ಕಿಟ್ ಸಿಗದೇ ಇರುವವರು ಬಿಳಿ ವಸ್ತ್ರ ಧರಿಸಿ ಕುಟುಂಬ ಸಮೇತರಾಗಿ ಆಗಮಿಸಿ ಈ ಶತಮಾನದ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕೆಂದು ರಮೇಶ್ ವಿನಂತಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…