ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಇವರು ಅಧ್ಯಯನ ಮಾಡುವ ಸ್ಥಳೀಯ ಶಾಲೆಗಳಿಗೆ ಮೂಲ ಸೌಕರ್ಯಗಳ ಅಗತ್ಯವಿದ್ದು, ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸಂಘ ಸಂಸ್ಥೆಗಳ ನೆರವು ಅಗತ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗದ ಬೀರನಕೆರೆ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಗೆ ಲಕ್ಷ್ಮಿ ಫೈನಾನ್ಸ್ನ ಬದರೀನಾಥ್ ಹಾಗೂ ಸ್ವಪ್ನಾರವರು ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಶಾಲಾ ಮಕ್ಕಳಿಗೆ ಸಮವಸ್ತç, ಲೇಖನ ಸಾಮಾಗ್ರಿ ಹಾಗೂ ಶಾಲೆಗೆ ಡ್ರಂ ಸೆಟ್ಸ್ನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಪರೀಕ್ಷೆಗಳ ಫಲಿತಾಂಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಗ್ರಾಮೀಣ ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲೂ ರಾಜ್ಯ ರಾಷ್ಟç ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಅಭಿನಂದನೀಯ ಎಂದರು.
ರಾಜ್ಯದ ಎಲ್ಲ ಭಾಗಗಳಲ್ಲಿ ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯದ ಕೊರತೆ ಗಮನಿಸಿ ಸ್ಥಳೀಯ ಸಂಘ ಸಂಸ್ಥೆಗಳು ಕೊಡುಗೆ ನೀಡಬೇಕು. ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡುವಂತೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಜೆಸಿಐ ಸಹ್ಯಾದ್ರಿ ಶಿವಮೊಗ್ಗದ ಸತೀಶ್‌ಚಂದ್ರ ಮಾತನಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರ ನೆರವಿನಿಂದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸಬೇಕು. ಮಾದರಿ ಶಾಲೆಗಳಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ. ಮುಂದಿನ ದಿನಗಳಲ್ಲಿ ಎಲ್ಲರೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಸವರಾಜ್ ಹಿರೇಮಠ್, ಚಂದ್ರನಾಯ್ಕ್, ಕಾರ್ಯದರ್ಶಿ ಸಂತೋಷ್ ಹಾಗೂ ಶಿಕ್ಷಕರು ಗ್ರಾಮಸ್ಥರು ಉಪಸ್ಥಿತರಿದ್ದರು.