ಶಿವಮೊಗ್ಗ: ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಆರಂಭಿಕ ಹಂತದಲ್ಲಿ ಕಾಳಜಿ ವಹಿಸುವ ಅಂಗನವಾಡಿ ಸಹಾಯಕರ ಕರ್ತವ್ಯ ಶ್ಲಾಘನೀಯ ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಚಾರ್ಯ ಬಸವರಾಜಪ್ಪ ಹೇಳಿದರು.

ಶಿವಮೊಗ್ಗ ನಗರದ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಪೂಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕರಿಗೆ ಆರೋಗ್ಯ ಕಿಟ್‌ಗಳ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಅಂಗನವಾಡಿ ಸಹಾಯಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜತೆಯಲ್ಲಿ ಕಿಟ್‌ಗಳನ್ನು ಒದಗಿಸುತ್ತಿರುವುದು ಮಾದರಿ ಕಾರ್ಯವಾಗಿದೆ. ಎಲ್ಲರೋ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ಬಾಲ್ಯದಿಂದಲೇ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರು ಮಕ್ಕಳಿಗೆ ಪೌಷ್ಠಿಕಾಂಶದ ಆಹಾರ ನೀಡುವ ಮೂಲಕ ಆರೋಗ್ಯವಂತರಾಗಿ ಬೆಳೆಯುವಂತೆ ಮಾಡಬೇಕು. ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಸಂಸ್ಕಾರ ಹೊಂದಿರುವ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಮಾರ್ಗದರ್ಶನ ನೀಡಬೇಕು ಎಂದರು.
ಪೂಜಾ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಸವಿತಾ, ಭದ್ರಾವತತಿಯ ಸಿದ್ಧಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಸೂಪರ್‌ವೈಸರ್ ಪ್ರತೀಮಾ, ಲೀಲಾ, ಪೂಜಾ, ಸುಮಾ ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಪ್ರಮುಖರು ಹಾಜರಿದ್ದರು.

ವರದಿ ಪ್ರಜಾಶಕ್ತಿ…