ಶಿವಮೊಗ್ಗ: ಕೇಂದ್ರ ಸರ್ಕಾರ ಭೂತಾನ್ ನಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಹಾಗು ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸನ್ನು ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿದ್ದು, ಇದನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಟಿ. ನೇತ್ರಾವತಿ ಹೇಳಿದರು.
ನಗರದ ಮಥುರಾ ಪ್ಯಾರಡೈಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದ್ಯ ಕೇಂದ್ರ ಸರ್ಕಾರ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳಲು ತೀರ್ಮಾನಿಸಿದ್ದು, ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ದೇಶೀಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.
ನಮ್ಮ ದೇಶದಲ್ಲಿಯೇ ಸಾಕಷ್ಟು ಅಡಿಕೆ ಬೆಳೆದು ರಫ್ತು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನೀತಿಯಿಂದಾಗಿ ಕಡಿಮೆ ಗುಣಮಟ್ಟದ ವಿದೇಶಿ ಅಡಿಕೆಯೊಂದಿಗೆ ದೇಶೀಯ ಗುಣಮಟ್ಟದ ಅಡಿಕೆ ಮಿಶ್ರವಾಗುವುದರಿಂದ ಸ್ವದೇಶಿ ಅಡಿಕೆ ಬಗ್ಗೆ ಗ್ರಾಹಕರಲ್ಲಿ ತಪ್ಪು ಭಾವನೆ ಬರುವುದಲ್ಲದೆ, ಅಡಿಕೆ ಬೆಳೆ ಕುಸಿತ ಕಂಡು ಅಡಿಕೆ ಬೆಳೆಗಾರರು ಸಂಕಷ್ಟಕ್ಕೊಳಗಾಗಲಿದ್ದಾರೆ. ಆದ್ದರಿಂದ ಕೂಡಲೇ ಅಡಿಕೆ ಹಾಗೂ ಕಾಳುಮೆಣಸು ಆಮದು ಮಾಡಿಕೊಳ್ಳಲು ಅನುಮತಿ ನೀಡಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿಯಾದ ಆಮದು ಸುಂಕ ನೀತಿ ಇಲ್ಲ. ಇದನ್ನೇ ದುರ್ಬಳಕೆ ಮಾಡಿಕೊಂಡು ರೈತರ ಹಿತದೊಂದಿಗೆ ರಾಜೀ ಮಾಡಿಕೊಳ್ಳಲಾಗಿದೆ. ಈ ಕುರಿತು ಸಂಬಂಧಪಟ್ಟ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಮಾಜಿ ಮೇಯರ್ ಏಳುಮಲೈ(ಕೇಬಲ್ ಬಾಬು) ಮಾತನಾಡಿ, ಹಲವಾರು ವರ್ಷಗಳಿಂದ ಹಳದಿ ರೋಗ ಹಾಗೂ ಕೊಳೆ ರೋಗದಿಂದ ಅಡಿಕೆ ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಆರಂಭವಾಗಿರುವ ಎಲೆಚುಕ್ಕಿರೋಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಅಡಿಕೆ ಬೆಳೆ ನಾಶವಾಗುತ್ತಿದೆ. ಸರ್ಕಾರ ಇದಕ್ಕೆ ಔಷಧಿ ಕಂಡು ಹಿಡಿಯುತ್ತಿದ್ದೇವೆಂದು ಹೇಳುತ್ತಿದೆ. ಆದರೆ ಈ ರೋಗದ ಬಗ್ಗೆ ಇನ್ನು ಅಧ್ಯಯನವೇ ನಡೆದಿಲ್ಲ. ಸರ್ಕಾರದ ವಿಳಂಬ ನೀತಿಯಿಂದಾಗಿ ಅಡಿಕೆ ಬೆಳೆ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದೆ. ಕೂಡಲೇ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ರೈತರ ನೆರವಿಗೆ ಬರಬೇಕು. ಹಳದಿರೋಗ, ಬೇರುಹುಳು ರೋಗ, ಕೊಳೆರೋಗ, ಎಲೆಚುಕ್ಕಿರೋಗದಿಂದ ರೈತರು ಸಂಕಷ್ಟಕ್ಕೊಳಗಾಗುತ್ತಿದ್ದು, ಅಡಿಕೆ ಬೆಳೆಗಾರರ ಅನುಕೂಲಕ್ಕಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇನ್ನು ರೈತರ ಬೆಳೆ ನಾಶ ಕುರಿತಂತೆ ರಾಜ್ಯ ಸರ್ಕಾರ ತಟಸ್ಥವಾಗಿದೆ. ಕಳೆದ ಬಾರಿಯ ಬೆಳೆನಾಶದ ಪರಿಹಾರವನ್ನೇ ಸಮರ್ಪಕವಾಗಿ ವಿತರಣೆ ಮಾಡಿಲ್ಲ. ಈ ಬಾರಿ ಅತಿವೃಷ್ಟಿಯಿಂದಾಗಿ ಬಹುತೇಕ ಎಲ್ಲ ಬೆಳೆಗಾರರೂ ನಷ್ಟಕ್ಕೊಳಗಾಗಿದ್ದು, ಕೂಡಲೇ ರಾಜ್ಯ ಸರ್ಕಾರ ರೈತರ ಬೆಳೆನಾಶಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಡಿಕೆ ಮತ್ತು ಕಾಳುಮೆಣಸು ಆಮದು ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು. ಎಲೆಚುಕ್ಕಿರೋಗದಿಂದ ಬಾಧಿತರಾಗಿರುವ ರೈತರ ನೆರವಿಗೆ ಬರಬೇಕು. ಬೆಳೆಹಾನಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಮುಖಂಡರಾದ ಸುರೇಶ್ ಕೋಟೆಕರ್, ರಾಘವೇಂದ್ರ ಭಾರಧ್ವಾಜ್ ಮೊದಲಾದವರಿದ್ದರು.