ಶಿವಮೊಗ್ಗ ಜಿಲ್ಲೆಯ ಸುಮಾರು 1250ಕ್ಕೂ ಹೆಚ್ಚಿನ ಶಾಲಾ ಆಸ್ತಿಗಳಲ್ಲಿ ಒತ್ತುವರಿ, ಒಡೆತನ, ದಾಖಲೆಗಳ ನಿರ್ವಹಣೆಯಲ್ಲಿ ನ್ಯೂನತೆ ಮುಂತಾದ ಸಮಸ್ಯೆಗಳಿದ್ದು, ಅವುಗಳಿಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಕ್ರಿಯರಾಗುವಂತೆ ಹಾಗೂ ಕೈಗೊಂಡ ಕ್ರಮದ ಕುರಿತು ಕೂಡಲೇ ವರದಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತ ಡಾ|| ವಿಶಾಲ್ ಆರ್. ಅವರು ಹೇಳಿದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಇಲಾಖೆಯ ಉಪನಿರ್ದೇಶಕರು, ಕ್ಷೇತ್ರಶಿಕ್ಷಣಾಧಿಕಾರಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷಿಸಿದಲ್ಲಿ ಆಸ್ತಿಯು ಪರಭಾರೆಯಾಗುವ ಸಂಭವವಿದೆ ಎಂದವರು ನುಡಿದರು.
ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಕಟ್ಟಡಗಳು, ದುರಸ್ತಿ ಕಾರ್ಯಗಳು ಸರಿಯಾದ ಹಂತದಲ್ಲಿ ನಡೆಯುತ್ತಿವೆ ಎಂಬುದನ್ನು ಪರಿಶೀಲಿಸಲು ಹಾಗೂ ಸಕಾಲದಲ್ಲಿ ಸೂಕ್ತ ಮಾರ್ಗದರ್ಶನ ನೀಡಲು ಸಮರ್ಥ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿ ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಮಕ್ಕಳ ಆರೋಗ್ಯದ ಕಡೆ ಗಮನಹರಿಸಬೇಕು. ಸಕಾಲದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು. ಶಸ್ತ್ರಚಿಕಿತ್ಸೆ ಸೇರಿದಂತೆ ಹೆಚ್ಚಿನ ವೈದ್ಯಕೀಯ ಸೇವೆ ಅಗತ್ಯವಿರುವ ಮಕ್ಕಳಿಗೆ ಪೋಷಕರಿಗೆ ಅಗತ್ಯ ಮಾರ್ಗದರ್ಶನ ನೀಡಿ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಒದಗಿಸುವಲ್ಲಿ ಗಮನಹರಿಸಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವು ಶೇ.100ರಷ್ಟು ಇರುವಂತೆ ನೋಡಿಕೊಳ್ಳುವಂತೆ ಸೂಚಿಸಿದ ಅವರು, ಒಟ್ಟಾರೆಯಾಗಿ ಮಕ್ಕಳ ಕಲಿಕಾ ವಾತಾವರಣ ಕಲುಶಿತಗೊಳ್ಳದಂತೆ ನೋಡಿಕೊಳ್ಳುವಂತೆ ಕಿವಿಮಾತು ಹೇಳಿದರು.
ವಿತರಿಸಿ ಬಾಕಿ ಉಳಿದಿರುವ ಮಕ್ಕಳ ಸಮವಸ್ತ್ರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಈಗಾಗಲೇ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ಶೇ.95ರಷ್ಟು ವಿತರಿಸಲಾಗಿದೆ. ಉಳಿದ ಪಠ್ಯಪುಸ್ತಕಗಳನ್ನು ಶೀಘ್ರದಲ್ಲಿ ವಿತರಿಸಲಾಗುವುದು.

ತಾಯ್ತನ ಮತ್ತು ಮಗುವಿನ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಸಲಹೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಪ್ರಸಕ್ತ ಸಾಲಿನಲ್ಲಿ ಅಂಗನವಾಡಿಗೆ ಹಾಗೂ ಯು.ಕೆ.ಜಿ.ಗೆ ದಾಖಲಾಗಿರುವ 5-6ವರ್ಷ ವಯೋಮಿತಿಯೊಳಗಿನ ಹಾಗೂ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿ ದಾಖಲಾಗಬಹುದಾದ ಮಕ್ಕಳ ವಿವರಗಳನ್ನು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಬೇಕು. ಇದರಿಂದಾಗಿ ಮುಂದಿನ ಸಾಲಿನಲ್ಲಿ ಶಾಲೆಗೆ ದಾಖಲಾಗಬಹುದಾದ ಮಕ್ಕಳ ಸಮಗ್ರ ಮಾಹಿತಿ ಸಂಗ್ರಹಿಸುವಲ್ಲಿ, ಅರ್ಹರಿಗೆ ಸೌಲಭ್ಯ ವಿತರಿಸುವಲ್ಲಿ ಸಹಕಾರಿಯಾಗಲಿದೆ. ಈ ಎಲ್ಲಾ ಮಾಹಿತಿಯನ್ನು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಗ್ರಹಿಸಿಟ್ಟುಕೊಳ್ಳುವಂತೆ ಸೂಚಿಸಿದರು. ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಿತ ಇಲಾಖಾಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ ಅಲ್ಲದೇ ಸ್ಥಳೀಯವಾಗಿರುವ ಸಂಘ-ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಕೊಠಡಿ, ಪುಸ್ತಕ, ಮಕ್ಕಳ ಆರೋಗ್ಯ, ಪೀಠೋಪಕರಣ ಇತ್ಯಾದಿಗಳಿಗೆ ಬಳಸಿಕೊಳ್ಳುವಂತೆ ಸೂಚಿಸಿದರು.

ಮಕ್ಕಳ ಪೌಷ್ಠಿಕ ಆಹಾರ ಪೂರೈಕೆ ಯೋಜನೆಯಡಿ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಮೊಟ್ಟೆಯನ್ನು ಬೇಯಿಸಿ ಒದಗಿಸುವುದು ತ್ರಾಸದಾಯಕ. ಆದ್ದರಿಂದ ಬೇಯಿಸಿದ ಮೊಟ್ಟೆಯನ್ನು ರೂ.6/-ಗೆ ಪೂರೈಸಲು ಸಿದ್ಧವಿರುವ ಸಂಸ್ಥೆ, ಸಂಘಟನೆಗಳ ಸಹಕಾರ ಪಡೆಯುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಆರ್.ಸಿ.ಹೆಚ್. ಡಾ|| ನಾಗರಾಜ್‍ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…