ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ ಕೇಂದ್ರದ ವಿವಿಧ ಸ್ಥಳಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.
ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಹಾಗೂ ಮೇಲುಸ್ತುವಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಮಾತನಾಡಿ, ನವೆಂಬರ್ 18ರಂದು ನಗರದ 03ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10ರಿಂದ 1ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 257 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ 974ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 19ರಂದು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ 10.30ರಿಂದ 1ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 5,003ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ 4,202ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಿಗೆ ನೀರು, ವಿದ್ಯುತ್, ಶೌಚಾಲಯ ಮತ್ತಿತರ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ. ಅಲ್ಲದೇ ಶುದ್ಧ ಗಾಳಿ ಬೆಳಕು ಇರುವಂತೆ, ಪ್ರತಿ ಕೇಂದ್ರಗಳಿಗೆ ಕ್ಯಾಮರಾಗಳನ್ನು ಅಳವಡಿಸಿರುವಂತೆ ಸೂಚಿಸಲಾಗಿದೆ ಎಂದರು.
ಈ ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್‍ವಾಚ್. ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮಹಿಳೆಯರು ಸಾಂಪ್ರದಾಯಿಕ ಆಭರಣಗಳಲ್ಲದೇ ಇತರೆ ಆಭರಣಗಳು ಧರಿಸುವುದನ್ನು, ಹಿಜಾಬ್ ಧರಿಸುವುದನ್ನು ನಿರ್ಬಂಧಿಸಲಾಗಿದೆ ಎಂದವರು ತಿಳಿಸಿದರು.

ನಿಗಧಿಪಡಿಸಿದ ಈ ದಿನಾಂಕಗಳಂದು ನಡೆಯುವ ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಎ ದರ್ಜೆಯ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೇ ತ್ರಿಸದಸ್ಯರ ಹಲವು ತಂಡಗಳನ್ನು ರಚಿಸಲಾಗಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕ್ರಮವಹಿಸಲಾಗಿದೆ.
ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ ಅಲ್ಲದೆ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಾಧಿಕಾರಿಗಳು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…