ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಡ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಡವ, ಶ್ರೀಮಂತ ಎಂಬ ಬೇಧಭಾವ ತೋರದೆ, ಪ್ರತಿಯೊಬ್ಬರಿಗೂ ನಮ್ಮ ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಅದೇ, ರೀತಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಬೈಂದೂರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗಲು ನನಗೆ ಅವಕಾಶ ಕಲ್ಪಿಸಿಕೊಡಿ ಎಂದರು.

ರಾಜ್ಯದಲ್ಲಿ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆದೂರಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ನರೇಗಾ ಯೋಜನೆಗೆ ಬೇಡಿಕೆ ಹೆಚ್ಚಿದೆ. ಆದರೆ ಕೆಲಸವಿಲ್ಲ. ನಂದಿನಿ ಹಾಲು ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಧ್ವನಿ ಎತ್ತಲು, ನನಗೆ ಮತ ನೀಡಿ ಅವಕಾಶ ಒದಗಿಸಿಕೊಡಿ ಎಂದರು‌.

ಶಿವಮೊಗ್ಗ- ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದುಳಿದಿದೆ ಎನ್ನುವ ಅಳಕನ್ನು ತೊಡೆದು ಹಾಕಿ, ಬಂಗಾರಪ್ಪ ಅವರ ಚಿಂತನೆಗಳಿಗೆ ಜೀವ ತುಂಬಬೇಕಿದೆ. ಇದಕ್ಕೆ ಮಾಜಿ ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ, ಕೆ. ಗೋಪಾಲ ಪೂಜಾರಿ ಅವರ ನೆರವು ಅಗತ್ಯ. ಕ್ಷೇತ್ರದಲ್ಲಿ ಎಲ್ಲಾ ವರ್ಗಗಳನ್ನೂ ಕ್ರೂಡೀಕರಿಸಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದರು.

ಬಿಜೆಪಿ ಪಕ್ಷ ಮೇಲ್ಜಾತಿಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಇದು ನನ್ನ ಅನುಭವದ ಮಾತು. ಕೇಂದ್ರದ ಬಿಜೆಪಿ ಸರ್ಕಾರ ಉದ್ಯಮಿಗಳ ₹11 ಲಕ್ಷ ಕೋಟಿ ಹಣ ಮನ್ನಾ ಮಾಡಿದೆ. ಇದು ಜನ ಸಾಮಾನ್ಯರಿಗೆ ಅರಿವಾಗುತ್ತಿಲ್ಲ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರ ಕಾರ್ಪೊರೇಟ್‌ಗಳಿಗೆ ಮಣೆ ಹಾಕಿದೆ. ಅವರ ಆಪ್ತರು, ಸ್ನೇಹಿತರು ಜಗತ್ತಿನ ಅತೀ ಶ್ರೀಮಂತರಾಗಿ‌ ಬೆಳೆಯುತ್ತಿದ್ದಾರೆ. ಅಲ್ಲದೆ, ಅಕ್ರಮ ಸಂಪತ್ತು ಕ್ರೂಢೀಕರಿಸಿಕೊಂಡು ಜಗತ್ತಿನ ಶ್ರೀಮಂತ ಪಕ್ಷವಾಗಿ ಬೆಳೆದು ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಗಲಭೆ ಹೆಚ್ಚಾಗಿದ್ದು, ಪ್ರಜಾತಾಂತ್ರಿಕ ಮೌಲ್ಯಗಳು ಗಾಳಿಗೆ ತೂರಿದೆ ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ಕ್ಷೇತ್ರಕ್ಕೆ ಸ್ಟಾರ್ ನಟ ಬಂದಾಕ್ಷಣ ಬದಲಾವಣೆ ಆಗುವುದಿಲ್ಲ. ಬಡವರ ಸೇವೆ ಮಾಡುವ ನಾಯಕರನ್ನು ಮತದಾರರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಬಯಸುತ್ತಾರೆ. ನಾನಿಲ್ಲಿ ನಟನಾಗಿ ಬಂದಿಲ್ಲ. ಬದಲಾಗಿ, ಗೀತಾ ಅವರ ಗಂಡನಾಗಿ ಬಂದಿದ್ದೇನೆ. ನಿಮ್ಮ ನಂಬಿಕೆಗೆ ಅವರು ಮೋಸ ಮಾಡುವುದಿಲ್ಲ. ಒಂದು ಬಾರಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದರು.

ಬೈಂದೂರು ಕ್ಷೇತ್ರದ ಆಲೂರು, ನಾವುಂದ, ಕಾಲ್ತೋಡು, ಕಂಬದ ಕೋಣೆ, ತ್ರಾಸಿ ಗ್ರಾಮಾಂತರ ಪ್ರದೇಶಗಳಲ್ಲಿ ಸಭೆ ನಡೆಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತಾಲ್ಲೂಕಿನ ಮರವಂತೆ ಮಹಾರಾಜ ಸ್ವಾಮಿ ವರಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್,ಬೈಂದೂರು ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಜಿ.ಎ.ಭಾವ, ನಾಡದ ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಿವಿಂದ ಪೂಜಾರಿ, ರಾಜೇಶ್, ಕೆಪಿಸಿಸಿ ಸದಸ್ಯ ಪ್ರಕಾಶ್ ಇದ್ದರು.