ಮಂಜುನಾಥ್ ಶೆಟ್ಟಿ…
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ರಾಜಕೀಯ ಅಧ್ಯಾಯಕ್ಕೆ ಚಾಲನೆ ದೊರೆತಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವೀಕ್ಷಿಸಲು ಶಿವಮೊಗ್ಗ ನಗರದಲ್ಲಿ ಎರಡು ಕಡೆ ವಿಶೇಷ ಲೈವ್ ವೀಕ್ಷಣಾ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮದಿಂದ ಭಾಗವಹಿಸಿದರು.
ಗಂಗಾಧರಜ್ಜನವರ ಹೆಸರಿನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಡಾ. ಜಿ. ಪರಮೇಶ್ವರ್, ಡಾ. ಶರಣ್ ಪ್ರಕಾಶ್ ಪಾಟೀಲ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್, ಯು.ಟಿ. ಖಾದರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಶಿವಪ್ಪ ನಾಯಕ ವೃತ್ತದಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿ, ಬೃಹತ್ ಎಲ್‌ಇಡಿ ಪರದೆಯ ಮೂಲಕ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ವೀಕ್ಷಿಸಿದ ಅಭಿಮಾನಿಗಳು ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.ಬಳಿಕ ಸಾರ್ವಜನಿಕರಿಗೆ ಅನ್ನದಾನ ಮಾಡಲಾಯಿತು.