ಮಂಜುನಾಥ ಶೆಟ್ಟಿ…

ಪೋಷಕರು 2026ರ ಜೂನ್ 28ನೇ ಭಾನುವಾರದಂದು 0 – 5 ವರ್ಷದೊಳಗಿನ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಪೋಲಿಯೋ ಲಸಿಕಾ ಕೇಂದ್ರಕ್ಕೆ ಕರೆದುಕೊಂಡು ಹೋಗಿ ತಪ್ಪದೇ ಲಸಿಕೆಯನ್ನು ಹಾಕಿಸುವಂತೆ ಹಾಗೂ ಈ ಅವಧಿಯಲ್ಲಿ 5 ವರ್ಷದೊಳಗಿನ ಯಾವುದೇ ಮಗು ಪೋಲಿಯೊ ಲಸಿಕೆಯಿಂದ ಹೊರಗುಳಿಯದಂತೆ ವಿಶೇಷ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜೂನ್ 28ರಂದು ನಡೆಸಲಿರುವ ಪಲ್ಸ್‌ ಪೊಲೀಯೊ ಲಸಿಕಾ ಆಂದೋಲನದ ಪೂರ್ವಸಿದ್ಧತಾ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಒಟ್ಟು 1,23,388 ಮಕ್ಕಳು ಇದ್ದು, 17ಮೊಬೈಲ್‌ ಮತ್ತು 36ಸಂಚಾರಿ ಕೇಂದ್ರಗಳು ಸೇರಿದಂತೆ ಒಟ್ಟು 1069 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಲಸಿಕೆ ನೀಡಲು 3889 ಸಿಬ್ಬಂದಿಯನ್ನು ನೇಮಿಸಲಾಗಿದೆ ಅಲ್ಲದೆ ಸ್ವಯಂ ಸೇವಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತಿದೆ. ಮೇಲ್ವಿಚಾರಣೆಗಾಗಿ 194 ವೈದ್ಯಕೀಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.


ಪ್ರಸ್ತುತ ಜೂನ್ 28ರಂದು ಬಿಒಪಿವಿ ಲಸಿಕೆ ಬಳಸಿ ರಾಜ್ಯದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಒಂದೇ ಸುತ್ತಿನಲ್ಲಿ ನಡೆಸಲಾಗುತ್ತಿದೆ. ದೇಶವು ಕಳೆದ 14 ವರ್ಷಗಳಿಂದ ಪೋಲಿಯೊ ಮುಕ್ತವಾಗಿದ್ದರೂ, ಭಾರತದ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ನಿಯಂತ್ರಣಕ್ಕೆ ಬಾರದಿರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ ಎಂದು ತಿಳಿಸಿದ ಅವರು, ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ಎರಡು ದಿನಗಳ ಈ ಅವಧಿಯಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದರು.


ಸಹಕಾರ ನೀಡುವಂತೆ ಇಲಾಖೆಗಳ ಅಧಿಕಾರಿಗಳಿಗೆ ಮನವಿ…


ಆರೋಗ್ಯ ಇಲಾಖೆಯು ಈ ಬೃಹತ್ ಆಂದೋಲನವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿದ್ದು, ಅಗತ್ಯ ಸಹಕಾರ ನೀಡುವಂತೆ ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್‌ರಾಜ್‌ ಇಲಾಖೆ, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತೆಯೇ ನಗರದ ಸ್ವಯಂಸೇವಾ ಸಂಸ್ಥೆಗಳ ಸಹಯೋಗವನ್ನು ಪಡೆದುಕೊಳ್ಳಲಾಗುವುದು ಎಂದರು.


ಪಲ್ಸ್‌ ಪೋಲಿಯೋ ಕೇಂದ್ರಗಳಿಗೆ ಅಗತ್ಯವಿರುವ ಔ಼ಷಧಗಳನ್ನು ಸಕಾಲದಲ್ಲಿ ಸರಬರಾಜು ಮಾಡಲು, ಅಭಿಯಾನಕ್ಕೆ ಅಗತ್ಯವಾದ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಆರೋಗ್ಯ ಇಲಾಖೆಗೆ ನೀಡಬೇಕು.” ಪೋಲಿಯೋ ಲಸಿಕೆ ಸಂಗ್ರಹಿಸಿರುವ ಆಸ್ಪತ್ರೆ ಹಾಗೂ ಲಸಿಕಾ ಸಂಗ್ರಹಣಾಗಾರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಲು ಮೆಸ್ಕಾಂ ಇಲಾಖೆಗೆ ತಿಳಿಸಿದ ಅವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ನಿಖಿಲ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್‌, ಡಾ|| ಮಲ್ಲಪ್ಪ, ಡಾ|| ನಾಗರಾಜನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *