ಮಂಜುನಾಥ ಶೆಟ್ಟಿ…

ಬೆಂಗಳೂರು ಜಿಲ್ಲೆಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಳೇಕಹಳ್ಳಿ, ವಿಜಯ ಬ್ಯಾಂಕ್ ಲೇಔಟ್‌ನ ಮುಳ್ಳಿ ಸುಂದರಂ ಶೆಟ್ಟಿ ಸಭಾಭವನದಲ್ಲಿ ಜೈ ತುಳುನಾಡ್ ಸಂಘದ ವತಿಯಿಂದ ಆಯೋಜಿಸಿದ್ದ ‘ತುಳುನಾಡ ಆಟಿ’ ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಭಾಗದ ಯುವಕರು ತಮ್ಮ ನೆಲದ ಬೇರುಗಳೊಂದಿಗೆ ನಂಟು ಉಳಿಸಿಕೊಂಡು, ತುಳುನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಅವರು ಹೇಳಿದರು.

ಹಲವು ವರ್ಷಗಳಿಂದ ‘ತುಳುನಾಡ ಆಟಿ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿರುವ ನಿಧೀಶ್ ಹಾಗೂ ಅವರ ತಂಡದ ಕಾರ್ಯವನ್ನು ಪ್ರಶಂಸಿಸಿದ ಅವರು, ಇದೇ ತಂಡವು ಬೆಂಗಳೂರು ಕಂಬಳವನ್ನು ಯಶಸ್ವಿಗೊಳಿಸುವಲ್ಲಿಯೂ ಅಪಾರ ಶ್ರಮ, ಬದ್ಧತೆ ಹಾಗೂ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆಯನ್ನು ಬೆಂಗಳೂರಿನಲ್ಲಿಯೂ ಜೀವಂತವಾಗಿರಿಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಯುವ ಪೀಳಿಗೆ ತಮ್ಮ ನೆಲ, ನಾಡು ಹಾಗೂ ಸಂಸ್ಕೃತಿಯೊಂದಿಗೆ ಮತ್ತಷ್ಟು ಬಲವಾದ ನಂಟು ಬೆಳೆಸಿಕೊಳ್ಳಬೇಕು ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್, ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ ಅನಿಲ್ ಶೆಟ್ಟಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಂಬರಿಷ್, ಐ-ಕೇರ್ ಬ್ರಿಗೇಡ್ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *