ಮಂಜುನಾಥ್ ಶೆಟ್ಟಿ…

ಶಿವಮೊಗ್ಗದಲ್ಲಿ Eid ಮಿಲಾದ್ ಹಬ್ಬವನ್ನು ಆಚರಿಸಲಾಯಿತು.ಮಹಮ್ಮದ್ ಪೈಗಂಬರರ ಜನ್ಮದಿನದ ಅಂಗವಾಗಿ ಆಚರಿಸಲಾಗುತ್ತಿರುವ ಈದ್ ಮಿಲಾದ್ ಹಬ್ಬದ ಸಂಭ್ರಮ ನಗರದಲ್ಲಿ ಮುಗಿಲು ಮುಟ್ಟಿದ್ದು ಸಂಜೆ ಸಮಯದಲ್ಲಿ ನಗರದಾದ್ಯಂತ ಅದ್ದೂರಿ ಮೆರವಣಿಗೆ ನಡೆಯಿತು.

ನಗರದ ವಿವಿಧ ಬಡಾವಣೆಗಳು ಹಾಗೂ ಪ್ರಮುಖ ಪ್ರದೇಶಗಳಿಂದ ಸಾವಿರಾರು ಮುಸ್ಲಿಂ ಬಾಂಧವರು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಗಾಂಧಿ ಬಜಾರಿನಲ್ಲಿರುವ ಪ್ರಸಿದ್ಧ ಜಾಮಿಯಾ ಮಸೀದಿಯಿಂದ ಪ್ರಮುಖ ಮೆರವಣಿಗೆ ಆರಂಭವಾಯಿತು.ವಿವಿಧ ಪ್ರದೇಶಗಳಿಂದ ಜನರು ಮೆರವಣಿಗೆಯ ಮೂಲಕ ಜಾಮಿಯಾ ಮಸೀದಿಯತ್ತ ಹೆಜ್ಜೆ ಹಾಕಿದರು.

ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳು ಹಸಿರು ಬಾವುಟಗಳು, ಬಂಟಿಂಗ್ಸ್‌ಗಳು ಮತ್ತು ಬೃಹತ್ ಕಟೌಟ್‌ಗಳಿಂದ ಅಲಂಕರಿಸಲ್ಪಟ್ಟಿದ್ದು, ನಗರದಾದ್ಯಂತ ಹಬ್ಬದ ಸಂಭ್ರಮ ಕಳೆಗಟ್ಟಿದೆ.

ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ಇರಿಸಲಾಗಿದ್ದು, ಹಗಲು-ರಾತ್ರಿ ಕಣ್ಗಾವಲುಗಾಗಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು.ಪ್ರಮುಖ ವೃತ್ತಗಳು ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಒಟ್ಟಿನಲ್ಲಿ ಮೆರವಣಿಗೆ ಮತ್ತು ಹಬ್ಬವನ್ನು ಉತ್ತಮವಾಗಿ ಆಚರಿಸಿದರು.

Leave a Reply

Your email address will not be published. Required fields are marked *