ಮಂಜುನಾಥ್ ಶೆಟ್ಟಿ…

ಉಪವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಾ. ಮೈತ್ರಿ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರ ಭಾಗವಾಗಿ ನಗರದ ವಿವಿಧ ಹೋಟೆಲ್, ಬೇಕರಿ ಹಾಗೂ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಡಾ. ಮೈತ್ರಿ ಅವರು ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೋಟೆಲ್ ಹರ್ಷದಲ್ಲಿ ಆಹಾರ ಗುಣಮಟ್ಟ, ಸ್ವಚ್ಛತೆ ಪರಿಶೀಲನೆ…

ಮೊದಲಿಗೆ ಹೋಟೆಲ್ ಹರ್ಷಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳು ಅಡುಗೆ ಕೋಣೆ, ಆಹಾರ ತಯಾರಿಕಾ ಸ್ಥಳ, ಸಂಗ್ರಹಣಾ ವ್ಯವಸ್ಥೆ ಹಾಗೂ ಹೋಟೆಲ್‌ನ ಒಟ್ಟಾರೆ ಸ್ವಚ್ಛತೆಯನ್ನು ಪರಿಶೀಲಿಸಿದರು. ಗ್ರಾಹಕರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ದೊರೆಯುವಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸುವುದು, ಅಡುಗೆ ಸ್ಥಳವನ್ನು ಶುಚಿಯಾಗಿ ಇಟ್ಟುಕೊಳ್ಳುವುದು ಹಾಗೂ ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ನಿರ್ದೇಶನ ನೀಡಿದರು.

ತಾವರೆಕೊಪ್ಪ ನಿರಾಶ್ರಿತರ ಕೇಂದ್ರಕ್ಕೆ ಭೇಟಿ…

ನಂತರ ತಾವರೆಕೊಪ್ಪದ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ಡಾ. ಮೈತ್ರಿ ಅವರು ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಕೇಂದ್ರದಲ್ಲಿರುವವರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಆಹಾರ ಸಂಗ್ರಹಣೆ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ನಿರಾಶ್ರಿತರಿಗೆ ನೀಡುವ ಆಹಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಆರೋಗ್ಯಕ್ಕೆ ಹಾನಿಕರವಾಗುವ ಅಥವಾ ಗುಣಮಟ್ಟ ಕಳೆದುಕೊಂಡ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅದರಂತೆ ಅಲ್ಲಿನ ನಿರಾಶ್ರಿತರನ್ನ ಮಾತನಾಡಿಸಿ ಅವರ ಮನಗೆದ್ದಿದ್ದಾರೆ. 

ಬೇಕರಿಯಲ್ಲಿ ತಪಾಸಣೆ…

ಇದೇ ವೇಳೆ ವಿನೋಬ ನಗರದಲ್ಲಿರುವ ಸವಿ ಬೇಕರಿಗೂ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳು ಆಹಾರ ಪದಾರ್ಥಗಳ ತಯಾರಿಕೆ ಮತ್ತು ಸಂಗ್ರಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೇಕರಿಯಲ್ಲಿ ಮಾರಾಟಕ್ಕೆ ಇಡಲಾಗಿರುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಅವುಗಳ ಅವಧಿಯನ್ನು ಪರಿಶೀಲಿಸಿದರು. ಕೇಕ್ ವೊಂದರ ಮೇಲೆ 40 ದಿನಗಳ ಅವಧಿ ಇರಯವುದನ್ನ ಗಮನಿಸಿ ಅದಕ್ಕೇ ಎಸಿ ಅವರು ಸೂಕ್ತ ಸಲಹೆ ನೀಡಿದ್ದಾರೆ.

ಅವಧಿ ಮುಗಿದಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದು ಅಥವಾ ಬಳಕೆ ಮಾಡುವುದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಇಂತಹ ವಸ್ತುಗಳ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.

ಅವಧಿ ಮುಗಿದಿರುವ ಆಹಾರ ಸೇವನಾ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಹಾಗೂ ಸಾರ್ವಜನಿಕರಿಗೆ ನೀಡಬಾರದು ಎಂದು ಸ್ಪಷ್ಟವಾಗಿ ತಿಳಿಸಿದರು. ಆಹಾರ ಪದಾರ್ಥಗಳ ಪ್ಯಾಕಿಂಗ್, ತಯಾರಿಕೆ ದಿನಾಂಕ ಹಾಗೂ ಬಳಕೆ ಅವಧಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಉಪವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಡಾ. ಮೈತ್ರಿ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ನೇರವಾಗಿ ಪರಿಶೀಲನೆ ನಡೆಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ. ಕಚೇರಿಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸ್ಥಳಗಳಿಗೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಂಡು ಕ್ರಮ ಕೈಗೊಳ್ಳುವ ಅವರ ಕಾರ್ಯವೈಖರಿ ಇದೀಗ ಚರ್ಚೆಗೆ ಕಾರಣವಾಗಿದೆ.

ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ತಪಾಸಣೆಯ ವೇಳೆ ತಹಶೀಲ್ದಾರ್ ರಾಜೀವ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಸಾಥ್ ನೀಡಿದ್ದರು. 

Leave a Reply

Your email address will not be published. Required fields are marked *