ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲೆಯ ಶಿಕಾರಿಪರದಲ್ಲಿ ಜಿಲ್ಲಾಮಟ್ಟದ ‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜನರ ಅಹವಾಲುಗಳನ್ನು ಆಲಿಸಿ ತ್ವರಿತ ಪರಿಹಾರ ಒದಗಿಸುವ ವ್ಯವಸ್ಥೆಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 5 ರಂದು ಕೂಡ್ಲಿಗಿಯಲ್ಲಿ ಚಾಲನೆ ನೀಡಿದ್ದರು. ಅಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಶಿಕಾರಿಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಆನ್‌ಲೈನ್ ಮೂಲಕ ಸಲ್ಲಿಕೆಯಾಗಿದ್ದ ಅರ್ಜಿಗಳ ಪೈಕಿ ಕೆಲವು ಅರ್ಜಿಗಳನ್ನು ಖುದ್ದು ಪರಿಶೀಲಿಸಲಾಯಿತು. ಅರ್ಜಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಲಾಯಿತು.
ಬಹಳ ವ್ಯವಸ್ಥಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡುವ ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಬಿ. ನಿಖಿಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಹೇಮಂತ್, ಕರ್ನಾಟಕ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ಶ್ರೀ ನಗರದ ಮಹದೇವಪ್ಪ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀ ಎಸ್.ಪಿ. ನಾಗರಾಜಗೌಡ ಮತ್ತಿತರರು ಭಾಗವಹಿಸಿದ್ದರು.