ಮಂಜುನಾಥ್ ಶೆಟ್ಟಿ…
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಆಶೀರ್ವಾದದ ದೀಪ ಬೆಳಗಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ದೀಪ ಬೆಳಗಿಸಿ, ಶುಭಾಶಯಗಳನ್ನು ಸಲ್ಲಿಸಿದರು. “ಹೃದಯ ತುಂಬಿ ಹಾಡುವೆವು”, “ಶುಭಾಶಯಗಳು”, “ವಂದೇ ಮಾತರಂ” ಘೋಷಣೆಗಳು ಮೊಳಗಿದವು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ದೇಶದಲ್ಲಿ ವ್ಯಾಪಕ ವಿಶ್ವಾಸವಿದೆ ಎಂದು ಹೇಳಿದರು.ನರೇಂದ್ರ ಮೋದಿ ಅವರ ನಾಯಕತ್ವವನ್ನು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಜನರು ಒಪ್ಪಿಕೊಂಡಿದ್ದಾರೆ. ಪ್ರಧಾನಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸುತ್ತಿದ್ದರೂ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ವಿಜಯೇಂದ್ರ ಹೇಳಿದರು.
“ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್” ಎಂಬ ಆಶಯದೊಂದಿಗೆ ದೇಶದ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಮುನ್ನಡೆಯಬೇಕಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಯುವಶಕ್ತಿಯ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ಇಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಹಾಗೂ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು. ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಪಯಣವನ್ನು ಸ್ಮರಿಸಿದ ಅವರು, ಅವರ ಜನ್ಮದಿನದ ಅಂಗವಾಗಿ ದೇಶದಾದ್ಯಂತ ಆಶೀರ್ವಾದದ ದೀಪ ಬೆಳಗಿಸುವ ಮೂಲಕ ಅವರ ಆರೋಗ್ಯ, ಆಯಸ್ಸು ಹಾಗೂ ದೇಶವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಪ್ರಾರ್ಥಿಸಲಾಗುತ್ತಿದೆ ಎಂದರು.