ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ಕರ್ನಾಟಕ ಸರ್ಕಾರ ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಿತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಹೋಬಳಿಯ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದರು.

ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಸಾರ್ವಜನಿಕರಿಂದ ಸಲ್ಲಿಸಲಾದ ವಿವಿಧ ಮನವಿಗಳು ಹಾಗೂ ಅಹವಾಲುಗಳನ್ನು ಶಾಸಕರು ಆಲಿಸಿದರು. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಆದ್ಯತೆ ನೀಡಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಯೋಜನೆಗಳ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದರ ಜೊತೆಗೆ, ಅರ್ಹರು ಯಾವುದೇ ಕಾರಣಕ್ಕೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕು ತಹಶೀಲ್ದಾರ್ ರಾಜೀವ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *