ಮಂಜುನಾಥ್ ಶೆಟ್ಟಿ…

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ರ ಪರೀಕ್ಷೆಯು ನಗರದಲ್ಲಿ‌ ಅಕ್ಟೋಬರ್ 11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.


ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಪರೀಕ್ಷಾ ಕೇಂದ್ರಗಳು: ಶಿವಮೊಗ್ಗ ನಗರದಲ್ಲಿ ಮಾತ್ರವೇ ಒಟ್ಟು 22 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದೆ.


ಅಭ್ಯರ್ಥಿಗಳ ಸಂಖ್ಯೆ…

ಈ ಪರೀಕ್ಷೆಗೆ ಒಟ್ಟು 6,588 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.


ಭದ್ರತೆ ಮತ್ತು ನಿಷೇಧಾಜ್ಞೆ…

ಪರೀಕ್ಷೆಯು ನ್ಯಾಯಸಮ್ಮತವಾಗಿ ನಡೆಯಲು ಪರೀಕ್ಷಾ ದಿನದಂದು ಬೆಳಿಗ್ಗೆ 09.00 ರಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಎಲ್ಲಾ 22 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ ಎಸ್ ಎಸ್ )-2023 ರ ಸೆಕ್ಷನ್ 163 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.


ಪರೀಕ್ಷಾ ವ್ಯವಸ್ಥ…

ಪ್ರಶ್ನೆಪತ್ರಿಕೆ ವಿತರಣೆಗೆ ಒಟ್ಟು 07 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕಾಗಿ ತ್ರಿ-ಸದಸ್ಯ ಸಮಿತಿ ಹಾಗೂ ವಾಹನಕ್ಕೆ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ‘ವೆಬ್ ಕಾಸ್ಟಿಂಗ್’ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಬಿಡುವ ಮುನ್ನ ‘ಹಾಲ್ ಟಿಕೆಟ್ ಸ್ಕ್ಯಾನ್’ ಹಾಗೂ ‘ಫೇಸ್ ರೆಕಗ್ನಿಷನ್’ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ಪ್ರತಿ 05 ಕೇಂದ್ರಗಳಿಗೆ 1 ರಂತೆ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸೂಕ್ತ ಉಡುಪು ಪರಿಶೀಲನೆಗೆ ‘ಡ್ರೆಸ್ ಕೋಡ್ ಆಫೀಸರ್’ ಅವರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರ ಗಳ ಒಳಗೆ ಮೊಬೈಲ್, ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಸಮಯದಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಗೆ ನಿರ್ದೇಶಿಸಲಾಗಿದೆ ಎಂದ ಅವರು‌ ಶಾಂತಿಯುತವಾಗಿ ಹಾಗೂ ಸುಗಮವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಅಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *