ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ದಸರಾ ಹಾಗೂ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ, ರಂಗಭೂಮಿ ಕಲಾವಿದರ ಕುಟುಂಬಗಳಿಗೆ ಸಾಂತ್ವನ ಹೇಳಿ, ಹಿರಿಯ ಕಾಂಗ್ರೆಸ್ ಮುಖಂಡರ ಆರೋಗ್ಯ ವಿಚಾರಿಸಿದರು.

ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗಾಗಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹತ್ತು ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಆರಂಭವಾಗಲಿರುವ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಮತ್ತು ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಆಶಯ ವ್ಯಕ್ತಪಡಿಸಿದರು.

ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.

ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು.

ನಂತರ ಸೊರಬ ತಾಲ್ಲೂಕಿನ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತುರ್ತು ಕಾರಣಗಳಿಂದಾಗಿ ಶ್ರೀ ರೇಣುಕಾಂಬಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಸರಾ ಸಮಿತಿಯ ಸದಸ್ಯರನ್ನು ಭೇಟಿಯಾಗಿ, ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸುವಂತೆ ಶುಭ ಹಾರೈಸಿದರು. ಈ ವೇಳೆ ದಸರಾ ಸಮಿತಿಯ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹಿರಿಯ ರಂಗಕಲಾವಿದ ದೇವೇಂದ್ರಪ್ಪ ತಲಗುಂದ ಅವರ ಕುಟುಂಬಕ್ಕೆ ಸಾಂತ್ವನ…

ರಂಗಭೂಮಿಯ ಹಿರಿಯ ಕಲಾವಿದರೂ ಸಚಿವರ ಆಪ್ತರೂ ಆಗಿದ್ದ ದೇವೇಂದ್ರಪ್ಪ ತಲಗುಂದ ಅವರು ಶುಕ್ರವಾರ ನಿಧನರಾದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ದೇವೇಂದ್ರಪ್ಪ ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ಹಾಗೂ ನಾಡಿನ ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಸಂತಾಪ ಸೂಚಿಸಿದರು.

ಹಾಗೆಯೇ ಇತ್ತೀಚೆಗೆ ನಿಧನರಾದ ಅಶೋಕ್ ಮರ್ಗಿ ಅವರ ತಂದೆ ರಾಮಪ್ಪ ಮರ್ಗಿ ಅವರ ಕುಟುಂಬದವರನ್ನು ಸೊರಬ ತಾಲ್ಲೂಕಿನ ಬರದವಳ್ಳಿಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.

ಹಿರಿಯ ಕಾಂಗ್ರೆಸ್ ನಾಯಕರ ಆರೋಗ್ಯ ವಿಚಾರಣೆ…

ಸೊರಬ ತಾಲ್ಲೂಕಿನ ಜಡೆಕೋಟೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ತಮ್ಮ ಆಪ್ತರಾದ ಬಸವಂತಪ್ಪ ಅವರ ನಿವಾಸಕ್ಕೆ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅವರೊಂದಿಗೆ ಕೆಲಕಾಲ ಕಳೆದು ಧೈರ್ಯ ತುಂಬಿದರು. ಅವರು ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಒಡನಾಡಿಯಾಗಿದ್ದ ಜಡೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಎಸ್. ಈರಪ್ಪ ಅವರನ್ನು ಸಹ ಸಚಿವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಈರಪ್ಪ ಅವರ ಕುಟುಂಬದವರು ತೋರಿದ ಪ್ರೀತಿ ಮತ್ತು ವಿಶ್ವಾಸವನ್ನು ನಾನು ಎಂದಿಗೂ ಮರೆಯಲಾರೆ. ಬಂಗಾರಪ್ಪಾಜಿಯವರೊಂದಿಗೆ ಕಳೆದ ಕ್ಷಣಗಳನ್ನೆಲ್ಲ ನೆನಪಿನಲ್ಲಿಟ್ಟುಕೊಂಡಿರುವ ಇಂತಹ ಹಿರಿಯರ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಆಶಿಸುತ್ತೇನೆ” ಎಂದು ಭಾವುಕರಾಗಿ ನುಡಿದರು.

Leave a Reply

Your email address will not be published. Required fields are marked *