ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ರಸ್ತೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಟ್ರಾಫಿಕ್ ಸಿಪಿಐ ದೇವರಾಜ್ ಮುಂದಾಗಿದ್ದಾರೆ.

ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ವೃತ್ತ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಂಚಾರ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಭಾಗವಹಿಸಿದ್ದರು.

ಸಭೆಯಲ್ಲಿ ಪಾರ್ಕ್ ಬಡಾವಣೆ ಮತ್ತು ದುರ್ಗಿಗುಡಿ ರಸ್ತೆಗಳಲ್ಲಿನ ವಾಹನ ದಟ್ಟಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರ ವಾಹನಗಳಿಂದ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಗಮನಹರಿಸಲಾಯಿತು. ದೀಪಾವಳಿಯ ಒಳಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ. 

ಆಸ್ಪತ್ರೆಗಳ ಆವರಣದಲ್ಲೇ ಪಾರ್ಕಿಂಗ್ ವ್ಯವಸ್ಥೆ ಕಡ್ಡಾಯ…

ಖಾಸಗಿ ಆಸ್ಪತ್ರೆಗಳು ತಮ್ಮ ಆವರಣದಲ್ಲಿಯೇ ವಾಹನ ನಿಲುಗಡೆಗೆ ಅಗತ್ಯವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಪಾರ್ಕಿಂಗ್‌ಗಾಗಿ ಮೀಸಲಿಟ್ಟಿರುವ ಜಾಗವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಆಸ್ಪತ್ರೆಗಳ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಗಳ ಆಡಳಿತ ಮಂಡಳಿಗಳು ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

Leave a Reply

Your email address will not be published. Required fields are marked *