ಮಂಜುನಾಥ್ ಶೆಟ್ಟಿ…
ರಾಷ್ಟ್ರೀಯ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನವನ್ನು ಶಿವಮೊಗ್ಗದಲ್ಲಿ ವಿಭಿನ್ನವಾಗಿ ಆಚರಿಸಲಾಯಿತು. ಆಡಂಬರದ ಆಚರಣೆಗಳಿಗೆ ಬದಲಾಗಿ ವನ್ಯಜೀವಿ ಸಂರಕ್ಷಣೆಗೆ ಕೊಡುಗೆ ನೀಡುವ ಉದ್ದೇಶದಿಂದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿರುವ ಎರಡು ಹುಲಿಗಳನ್ನು ದತ್ತು ಪಡೆಯುವ ಮೂಲಕ ಅವರ ಜನ್ಮದಿನಕ್ಕೆ ಅರ್ಥಪೂರ್ಣ ಗೌರವ ಸಲ್ಲಿಸಲಾಯಿತು.
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ರಾಷ್ಟ್ರೀಯ ಪ್ರಾಣಿಯಾದ ಹುಲಿಗಳ ಸಂರಕ್ಷಣೆಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಂಹಧಾಮದಲ್ಲಿರುವ ‘ಪೂರ್ಣಿಮಾ’ ಹಾಗೂ ‘ವಿಕ್ರಂ’ ಎಂಬ ಹೆಸರಿನ ಎರಡು ಹುಲಿಗಳನ್ನು ದತ್ತು ಪಡೆಯುವ ಮೂಲಕ ಯುವ ಕಾಂಗ್ರೆಸ್ ಮುಖಂಡರು ಪರಿಸರ ಕಾಳಜಿಯ ಸಂದೇಶ ಸಾರಿದರು.
ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಿ. ಮಧುಸೂದನ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಗರಾಧ್ಯಕ್ಷರಾದ ಚರಣ್ ಶೆಟ್ಟಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಈ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.