ಮಂಜುನಾಥ್ ಶೆಟ್ಟಿ…

ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಕುಮಾರ್ ಐಪಿಎಸ್ ಹೇಳಿದರು.

ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿ, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸುಮಾರು 400ಕ್ಕೂ ಹೆಚ್ಚು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಬೆಳೆಯುತ್ತದೆ ಎಂದು ತಿಳಿಸಿದರು.

ಕ್ರೀಡೆಯಲ್ಲಿ ಗೆಲುವು ಸಾಧಿಸಿದಾಗ ಅಹಂಕಾರ ಪಡಬಾರದು. ಸೋಲು ಎದುರಾದಾಗ ನಿರಾಶರಾಗದೆ, ಅದನ್ನು ಮುಂದಿನ ಗೆಲುವಿಗೆ ಮೆಟ್ಟಿಲನ್ನಾಗಿ ಮಾಡಿಕೊಳ್ಳಬೇಕು. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಕ್ರೀಡಾಕೂಟದಲ್ಲಿ ಸುಮಾರು 400 ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಎಎಸ್ಪಿ ಕಾರ್ಯಪ್ಪ, ಡಿವೈಎಸ್ಪಿಗಳಾದ ಶೀಲವಂತ ಮತ್ತು ದಿಲೀಪ್, ಇನ್ಸ್‌ಪೆಕ್ಟರ್ ಯುವರಾಜ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *