ಮಂಜುನಾಥ್ ಶೆಟ್ಟಿ…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ದಿಢೀರ್ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಶಾಲೆಯ ಕಚೇರಿಗೆ ಭೇಟಿ ನೀಡಿದ ಸಚಿವರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲಿಸಿದರು. ‘ಕರ್ತವ್ಯ’ ಮತ್ತು ‘ನಿರಂತರ’ ಎಂಬ ಅಪ್ಲಿಕೇಶನ್ ನಲ್ಲಿ ಹಾಜರಾತಿ ದಾಖಲಿಸುವ ಪ್ರಕ್ರಿಯೆ ಹೇಗೆ ಸಾಗಿದೆ ಎಂದು ಮಾಹಿತಿ ಪಡೆದರು.

ಬಳಿಕ ವಿವಿಧ ತರಗತಿ ಕೊಠಡಿಗಳಿಗೆ ತೆರಳಿ ಮಕ್ಕಳೊಂದಿಗೆ ಸಂವಾದ ನಡೆಸಿ, ಕಲಿಕೆಯ ಗುಣಮಟ್ಟ, ಶಾಲೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ವಿಶೇಷವಾಗಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದ ಸಚಿವರು, ಊಟದ ಗುಣಮಟ್ಟದ ಬಗ್ಗೆ ಮಕ್ಕಳ ಅಭಿಪ್ರಾಯ ಆಲಿಸಿದರು. ಅಡುಗೆ ಸಿಬ್ಬಂದಿಯ ಕಾರ್ಯವೈಖರಿಯನ್ನು ಮೆಚ್ಚಿದ ಅವರು, ಊಟದ ರುಚಿ ಮತ್ತು ಗುಣಮಟ್ಟ ಉತ್ತಮವಾಗಿದೆ ಎಂದು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಎಲ್ಲಾ ಕೆಪಿಎಸ್ ಶಾಲೆಗಳಿಗೆ ಬಸ್ ಸೌಕರ್ಯ ಒದಗಿಸಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ. ಹೀಗಾಗಿ
ಮುಂದಿನ ಶೈಕ್ಷಣಿಕ ವರ್ಷದ ಜೂನ್ ತಿಂಗಳಿನಿಂದ ಬಸ್ ವ್ಯವಸ್ಥೆ ಆರಂಭಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಿಸುವಂತೆ ಮನವಿ ಸಲ್ಲಿಸಿದರು. ಈ ಬಗ್ಗೆ ನಮ್ಮ ಸರ್ಕಾರದಲ್ಲಿ ಚಿಂತನೆ ನಡೆದಿದೆ ಎಂದು ವಿದ್ಯಾರ್ಥಿಗಳಿಗೆ ಸಚಿವರು ತಿಳಿಸಿದರು.

ಮತ್ತೊಂದೆಡೆ, ತರಗತಿ ಕೊಠಡಿಯ ಪಕ್ಕದಲ್ಲೇ ವೆಲ್ಡಿಂಗ್ ಶಾಪ್ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ಯಂತ್ರಗಳ ಶಬ್ದದಿಂದ ಪಾಠಗಳನ್ನು ಆಲಿಸಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯೊಬ್ಬರು ಸಚಿವರ ಗಮನಕ್ಕೆ ತಂದರು.

ವಿದ್ಯಾರ್ಥಿಗಳ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಸಚಿವರು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯಲ್ಲಿನ ಕಲಿಕಾ ವಾತಾವರಣ, ಮಕ್ಕಳ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

3ಶಾಲಾ ಭೇಟಿ ವೇಳೆ ಅಧಿಕಾರಿಗಳಿಗಿಂತ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆದು, ಅವರೊಂದಿಗೆ ಬೆರೆತು ಊಟ ಸವಿದು, ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ್ದು ಭೇಟಿಯ ವಿಶೇಷವಾಗಿತ್ತು.

Leave a Reply

Your email address will not be published. Required fields are marked *