ಮಂಜುನಾಥ್ ಶೆಟ್ಟಿ…
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಶೇಕಡಾ 80ರಷ್ಟು ಮೀಸಲಾತಿ ಕಲ್ಪಿಸಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿರುವ ಎಲ್ಲಾ ವಾಣಿಜ್ಯ ವ್ಯವಹಾರಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ, ವ್ಯಾಪಾರ ಮತ್ತು ಉದ್ಯಮ ನಡೆಸಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯಸ್ಥರಿಗೆ ಮನವಿ ಹಾಗೂ ಹಕ್ಕುತಾಯ ಪತ್ರವನ್ನು ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸುಧೀರ್ಘವಾಗಿ ಚರ್ಚಿಸಿ ಮನವರಿಕೆ ಮಾಡುವುದರೊಂದಿಗೆ, ಎಲ್ಲಾ ವಿಭಾಗದಲ್ಲೂ ಕನ್ನಡಿಗರಿಗೆ ಪ್ರಾಮುಖ್ಯತೆ ನೀಡಬೇಕು, ಕನ್ನಡಿಗರಿಗೆ ತಾರತಮ್ಯ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ನೀಡಲಾಯಿತು.