ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಮೆಗ್ಗಾನ್ ಹಾಗೂ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಾಗದಿರುವುದು ಹಾಗೂ ವೈದ್ಯಾಧಿಕಾರಿಗಳ ದುರಾಡಳಿತವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿಯೇ ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯಕೀಯ ಪರೀಕ್ಷೆಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಔಷಧಗಳನ್ನು ಹೊರಗಿನ ಮೆಡಿಕಲ್ ಸ್ಟೋರ್‌ಗಳಿಂದ ಖರೀದಿಸುವಂತೆ ಸೂಚಿಸಲಾಗುತ್ತಿದೆ. ಸ್ಕ್ಯಾನಿಂಗ್ ಸೇರಿದಂತೆ ಹಲವು ಪರೀಕ್ಷೆಗಳಿಗೂ ಖಾಸಗಿ ಕೇಂದ್ರಗಳ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ರವಿಕುಮಾರ್ ಆರೋಪಿಸಿದರು.

ಶೌಚಾಲಯಗಳ ದುಸ್ಥಿತಿ, ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳ ದಾರಿ…

ಜಿಲ್ಲಾ ಬೋಧನಾ ಆಸ್ಪತ್ರೆಯ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಕೊಳೆತು ನಾರುತ್ತಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳಿದ್ದರೂ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಬಡವರು ಹಣವಿಲ್ಲದೆ ಚಿಕಿತ್ಸೆಗಾಗಿ ಬಂದಾಗಲೂ ಹೊರಗಡೆ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚಿಸಲಾಗುತ್ತಿದೆ ಎಂದು ಅವರು ದೂರಿದರು.

ಹೆರಿಗೆ ಸಂದರ್ಭದಲ್ಲೂ ಹಣ ವಸೂಲಿ ಆರೋಪ…

ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ಆರೋಪವನ್ನೂ ಸಂಘಟನೆ ಮಾಡಿದೆ. ಹೆಣ್ಣು ಮಗು ಜನಿಸಿದರೆ 1,800 ರೂ. ಹಾಗೂ ಗಂಡು ಮಗು ಜನಿಸಿದರೆ 2,500 ರೂ. ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳ ವಜಾಕ್ಕೆ ಆಗ್ರಹ…

ಆರೋಗ್ಯ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿರುವ ಸಿಂಹ ಸೇನೆ, ಆಸ್ಪತ್ರೆಯ ಆಡಳಿತದಲ್ಲಿ ದುರಾಡಳಿತ ನಡೆಸುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಬೇಕು ಅಥವಾ ಬೇರೆಡೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದೆ.

ಜಿಲ್ಲಾಡಳಿತ ಹಾಗೂ ಸರ್ಕಾರ ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ಜಿಲ್ಲಾಧ್ಯಕ್ಷ ಮಧುಸೂದನ್ ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *