ಮಂಜುನಾಥ್ ಶೆಟ್ಟಿ…
ಶಿವಮೊಗ್ಗ: ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರನ್ನು ಶಿವಮೊಗ್ಗ ಜಿಲ್ಲೆಯ ವಿವಿಧ ಕಾಂಗ್ರೆಸ್ ಘಟಕಗಳ ಮುಖಂಡರು ಭೇಟಿಯಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಬೇಳೂರು ಗೋಪಾಲಕೃಷ್ಣ ಅವರು ಜನಪರ ಕಾಳಜಿ, ಪಕ್ಷ ಸಂಘಟನೆಯ ಮೇಲಿನ ಬದ್ಧತೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಾಯಕರಾಗಿದ್ದಾರೆ. ಅವರಿಗೆ ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಂತಹ ಮಹತ್ವದ ಜವಾಬ್ದಾರಿ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಈ ನೇಮಕಾತಿಯಿಂದ ಪಕ್ಷಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಯ ರಾಜಕೀಯ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅವರಿಗೆ ದೊರೆತಿರುವ ಈ ಹೊಸ ಜವಾಬ್ದಾರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಜನರ ಆಶಯಗಳಿಗೆ ಸ್ಪಂದಿಸುವುದರ ಜೊತೆಗೆ ಪಕ್ಷದ ಸಂಘಟನೆಗೆ ಇನ್ನಷ್ಟು ಶಕ್ತಿ ತುಂಬಲಿ ಎಂದು ಮುಖಂಡರು ಶುಭ ಹಾರೈಸಿದರು.
ಅಭಿನಂದನೆ ಸಲ್ಲಿಸಿದವರಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಶಾಂತವೀರ ನಾಯ್ಕ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ, ಕಾರ್ಮಿಕ ವಿಭಾಗದ ಮುಖಂಡರಾದ ಭೀಮನೇರಿ ಆನಂದ, ಗಿರೀಶ್ ಕೋವಿ, ನಾರಾಯಣಪ್ಪ, ಮಹಾಬಲೇಶ ಕೌತಿ, ಚಂದ್ರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



