ಶಿವಮೊಗ್ಗ: ಕನ್ನಡ ಬಾವುಟ ಸುಟ್ಟು ಹಾಕಿದ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿರುವ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ, ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನ ಮಾಡಿದ ರಾಷ್ಟ್ರಭಕ್ತ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿರುವ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿರುವ ಎಂಇಎಸ್ ಮತ್ತು ಶಿವಸೇನೆ ದುಷ್ಟರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು ಎಂದು ಒತ್ತಾಯಿಸಿದರು.ಇಲ್ಲವಾದಲ್ಲಿ ರಾಜ್ಯಾದ್ಯಂತ ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.