ಶಿವಮೊಗ್ಗ: ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯ ಬೆಳಗ್ಗೆ ಬಿಸಿ ಹಾಲಿನ ಜೊತೆಗೆ ಒಂದು ಬನ್ಸ್(ಬ್ರೆಡ್) ನೀಡುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಧರಣಿ ನಡೆಸಿದರು.ಶಾಲೆಯಲ್ಲಿ ಮಕ್ಕಳಿಗೆ ಬ್ರೆಡ್ ನೀಡುವ ಜೊತೆಗೆ ಬಿಸಿಯೂಟ ತಯಾರಿಸುವಾಗ ಸಿಲಿಂಡರ್ ಬಗ್ಗೆ ಜಾಗರೂಕತೆ ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು.
ಸ್ವಚ್ಛತೆಯಿಂದ ಉತ್ತಮ ಗುಣಮಟ್ಟದ ಪದಾರ್ಥ ಉಪಯೋಗಿಸಿ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ನೀಡಬೇಕೆಂದು ಆಗ್ರಹಿಸಿದರು.ಇತ್ತೀಚೆಗೆ ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿದ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದೇ ರೀತಿ ಭದ್ರಾವತಿ ತಾಲೂಕಿನ ಜಂಕ್ಷನ್ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡ್ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.
ಆದ್ದರಿಂದ ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಕುರಿತಾಗಿ ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.