ಶಿವಮೊಗ್ಗ: ಕೋವಿಡ್ ಪ್ರಕರಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಜನರ ವ್ಯಾಪಾರ, ವಹಿವಾಟು, ಶಾಲಾ ಕಾಲೇಜುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಗಡಿಭಾಗಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತಿತರ ಕಡೆಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಇರುವುದರಿಂದ ಲಾಕ್ಡೌದನ್ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.ಕಳೆದ 2 ವರ್ಷದಿಂದ ಕೊರೋನಾದಿಂದಾಗಿ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ವ್ಯಾಪಾರ ವಹಿವಾಟು ನಡೆಯದೆ ಹಲವರಿಗೆ ಆರ್ಥಿಕ ಸಂಕಷ್ಟವಾಗಿದೆ.

ಇದನ್ನು ಅರಿತು ಕೊರೋನಾದಿಂದಾಗಿ ಜನಸಾಮಾನ್ಯರ ಬದುಕಿಗೆ ತೊಂದರೆಯಾಗದಂತೆ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಜನರು ಸಹ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತಮ್ಮ ರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಬೇಕೆಂದು ವಿನಂತಿಸಿದರು. ಕೊರೋನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸುವುದು ಸರಿಯಲ್ಲ. ಸರ್ಕಾರ ಬಿಗಿ ಕ್ರಮ ಕೈಗೊಂಡಿದ್ದು, ಕೊರೋನಾದ ಹಿನ್ನಲೆಯಲ್ಲಿಯೇ ಹೊರತು ಯಾವುದೇ ರಾಜಕೀಯ ಉದ್ದೇಶದಿಂದಲ್ಲ. ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾವು ಪಾದಯಾತ್ರೆ ಮಾಡುವುದೇ ಸರಿ ಎಂದು ಹಠ ಹಿಡಿಯುತ್ತಿದ್ದಾರೆ ಇದು ಸರಿಯಲ್ಲ.

ಸಾವಿರಾರು ಜನ ಪಾದಯಾತ್ರೆ ಮಾಡಬೇಕಾಗುತ್ತದೆ. ಬೆಂಗಳೂರಿನಲ್ಲಿ ಈಗಾಗಲೇ ಕೊರೋನಾ ಪ್ರಕರಣ ಹೆಚ್ಚಾಗಿವೆ. ಸುರಕ್ಷತೆ ದೃಷ್ಠಿಯಿಂದ ಈ ನಿಯಮ ಜಾರಿಗೆ ತಂದಿದ್ದೇವೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.

ವರದಿ ಮಂಜುನಾಥ್ ಶೆಟ್ಟಿ…